ಬೆಂಗಳೂರು: ರಾಜ್ಯದ ಎಲ್ಲಾ ಎಸ್ ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಸಿಎಂ ಮಾತನಾಡಿದರು.
ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು,ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು, ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು, ದರೋಡೆ ಮಾಡಿಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು.ಅಂತಹ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದು ಸಿದ್ದು ಬಣ್ಣಿಸಿದರು.
ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು, ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದು ವಿವರಿಸಿದರು.
ರಾಮನ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದು ಸಿದ್ದರಾಮಯ್ಯ ಹೇಳಿದರು.
SCSP/TSP ಮೂಲಕ SC/ST ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ ಎಂದು ಇದೇ ವೇಳೆ ಸಿಎಂ ತಿಳಿಸಿದರು.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲೀ SCSP/ TSP ಕಾಯ್ದೆಯನ್ನು ಜಾರಿಗೆ ತಂದಿಲ್ಲ,
ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದು ಬಿಜೆಪಿ ಆಗ್ರಹಿಸಿದರು.
ಸತ್ಯವನ್ನು ಧೈರ್ಯವಾಗಿ-ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ ಎಂದು ಸಿದ್ದು ಹೇಳಿದರು.
ರಾಜನಹಳ್ಳಿ ವಾಲ್ಮೀಕಿ ಸಮುದಾಯದ ಮಠದ ಜಗದ್ಗುರು ಪ್ರಸನ್ನಾ ನಂದಪುರಿ ಶ್ರೀಗಳು ದಿವ್ಯ ಸಾನಿದ್ಯ ವಹಿಸಿದ್ದರು.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಕೆ.ಪಾಟೀಲ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿ ಬಿ ಅಧ್ಯಕ್ಷ ಅಜಯ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.