ಬೆಂಗಳೂರು: ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಿರುವ ನೋಟಿಸುಗಳನ್ನು ತಕ್ಷಣ ವಾಪಸ್ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಆದೇಶಿಸಿದ್ದಾರೆ
ಜತೆಗೆ ಇನ್ನು ಮುಂದೆ ರೈತರಿಗೆ ಯಾವುದೇ ತೊಂದರೆ ನೀಡಕೂಡದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.
ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ ನಡೆಸಿ ಅಧಿಕಾರಿಗಳಿಗೆ ಮೇಲಿನ ಸೂಚನೆ ನೀಡಿದರು.
ವಕ್ಫ್ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ನೋಟಿಸ್ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆ ಗರಂ ಆದರು.
ವಕ್ಫ್ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ಜನತೆ ಸೊಪ್ಪು ಹಾಕಬಾರದು,ಅಪ ಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಕೋರಿದರು.
ಅಧಿಕಾರಿಗಳು ಕೂಡಾ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ನಿರ್ದೇಶಿಸಿದರು.
ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್ ಪಡೆಯಬೇಕು,ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ತೊಂದರೆ ನೀಡಬಾರದು,ಕಾನೂನು ಬಾಹಿರವಾಗಿ ಹಾಗೂ ನೋಟೀಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ತೀರ್ಮಾನಿಸಲಾಯಿತು.
ಸಭೆಯಲ್ಲಿ ಸಚಿವರುಗಳಾದ ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ,ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ,ರಾಜಕೀಯ ಕಾರ್ಯದರ್ಶ಼ಿ ನಸೀರ್ ಅಹಮದ್, ವಕ್ಫ್ ಮಂಡಳಿಯ ಸಿಇಒ ಜಿಲಾನಿ, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.