ಸಿಎಂ ಆತ್ಮಸಾಕ್ಷಿಗೆ ಹಲವು ಪ್ರಶ್ನೆ ಕೇಳಿರುವ ಅಶೋಕ್

ಬೆಂಗಳೂರು: ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ, ವಿರೋಧವೂ ಇಲ್ಲ ಎಂದು ‌ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬಿಜೆಪಿಯ ಮೂಲಸಿದ್ಧಾಂತವಾದ ಅಂತ್ಯೋದಯದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯ, ಸಾಮಾಜಿಕವಾಗಿ, ಶೈಕ್ಷಣಿಕ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಅಶೋಕ್ ಟ್ವೀಟ್ ಮಾಡಿದ್ದಾರೆ.

ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ‌ತಿಳಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಸಿಎಂ ನವರ ಆತ್ಮಸಾಕ್ಷಿಗೆ ನಮ್ಮ ಕೆಲವು ಪ್ರಶ್ನೆಗಳಿವೆ ಎಂದು ಪ್ರಶ್ನೆ ಹಾಕಿದ್ದಾರೆ.

ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ.

ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ.

ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ  ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ  ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದು 17 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ವರದಿ ಸ್ವೀಕರಿಸಲು ಮುಂದಾಗಿರುವುದು ಯಾವ ಕಾರಣಕ್ಕೆ.

ಹಗರಣಗಳ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ.

ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ,ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ.

ಅಕ್ಟೋಬರ್ 18ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಗಳ ‘ಆತ್ಮಸಾಕ್ಷಿ’ ಈ ಪ್ರಶೆಗಳನ್ನ ಆತ್ಮಾವಲೋಕನ ಮಾಡಿ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು ಅಶೋಕ್ ಹೇಳಿದ್ದಾರೆ.