ಹುಬ್ಬಳ್ಳಿ:ಆಡಳಿತದ ಕಡೆ ಹೆಚ್ಚಿನ ಗಮನಹರಿಸಬೇಕಾಗಿರುವುದರಿಂದ ದೆಹಲಿಗೆ ಹೋಗುವುದಿಲ್ಲ ಎಂದು ಹೇಳುವ ಮೂಲಕ ಸಚಿವಾಕಾಂಕ್ಷಿಗಳ ಆಸೆಯನ್ನು ಸಿಎಂ ನಿರಾಸೆಗೊಳಿಸಿದ್ದಾರೆ.
ಈ ಮೂಲಕ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
ಸಂಕ್ರಾಂತಿ ನಂತರ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬಂದಿತ್ತು.
ಆದರೆ ಇದಕ್ಕೆ ತೆರೆ ಎಳೆದಿರುವ ಸಿಎಂ, ಸದ್ಯಕ್ಕೆ ದೆಹಲಿಗೆ ಹೋಗುವುದಿಲ್ಲ ಎನ್ನುವ ಮೂಲಕ ಆಕಾಂಕ್ಷಿಗಳ ಆಸೆಗೆ ತಣ್ಣೀರು ಎರಚಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಬೊಮ್ಮಾಯಿ ಮಾತನಾಡಿದರು.
ಗುರುವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಅಕಾರಿಗಳು(ಸಿಇಒ) ಹಾಗೂ ಶುಕ್ರವಾರ ಎಲ್ಲ ಜಿಲ್ಲಾಕಾರಿಗಳ ಜೊತೆ ಸಭೆ ನಡೆಸಲಿದ್ದೇನೆ. ಹೀಗಾಗಿ ದೆಹಲಿಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಆಡಳಿತಕ್ಕೆ ಹೆಚ್ಚಿನ ವೇಗ ನೀಡಬೇಕಾಗಿದೆ. ದೆಹಲಿಯಲ್ಲಿ ನನಗೆ ಯಾವುದೇ ಅಧಿಕೃತ ಕಾರ್ಯಕ್ರಮಗಳು ಇಲ್ಲ. ವರಿಷ್ಠರು ಬರುವಂತೆಯೂ ಸೂಚನೆ ಕೊಟ್ಟಿಲ್ಲ ಎಂದು ಹೇಳಿದರು.
ಬಿಜೆಪಿ ಕಾರ್ಯಕಾರಿಣಿ ಸಭೆ ಅತ್ಯಂತ ಫಲಪ್ರದವಾಗಿ ನಡೆದಿದೆ. ಮಂಗಳವಾರ ನಡೆದ ಸಭೆಯಲ್ಲಿ ನಮ್ಮ ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ ಎಂದು ತಿಳಿಸಿದರು.
ಪಕ್ಷವನ್ನು ಇನ್ನಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಮಟ್ಟದಲ್ಲಿ ಕೆಲವು ಹೊಸ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವುದರ ಬಗ್ಗೆ ಚರ್ಚೆ ನಡೆಸಲಾಗಿದೆ.
ವರಿಷ್ಠರು ನಮ್ಮ ಬಗ್ಗೆ ಏನು ನಿರೀಕ್ಷೆ ಇಟ್ಟುಕೊಂಡಿದ್ದಾರೋ ಅದನ್ನು ಪಾಲಿಸುತ್ತೇವೆ ಎಂದರು.
ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂದು ಅರುಣ್ ಸಿಂಗ್ ಸೂಚಿಸಿದ್ದಾರೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸಿಕೊಂಡು ಮುನ್ನಡೆಯುತ್ತೇವೆ. ಮುಂಬರುವ ಎಲ್ಲ ಹಂತದ ಚುನಾವಣೆಯಲ್ಲೂ ಪಕ್ಷವು ಮೇಲುಗೈ ಸಾಧಿಸಲು ಕಾರ್ಯತಂತ್ರ ರೂಪಿಸುತ್ತೇವೆ ಎಂದು ಸಿಎಂ ತಿಳಿಸಿದರು.
ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಾರೂ ಎಲ್ಲಿಗೆ ಬೇಕಾದರೂ ಹೋಗಲು ಸರ್ವಸ್ವತಂತ್ರರು ಎಂದರು.