ಬೆಂಗಳೂರು:ಕೋವಿಡ್ 3ನೆ ಅಲೆ ಹಿನ್ನೆಲೆಯಲ್ಲಿ ಸಾವುನೋವು ಹೆಚ್ಚಾಗದಂತೆ ನೋಡಿಕೊಳ್ಳಲು ಸೋಂಕಿತರಿಗೆ ಅಗತ್ಯವಾದ ಚಿಕಿತ್ಸೆ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಅವರು ಮಾತನಾಡಿದರು.
ಕೊರೊನಾ ಹೆಮ್ಮಾರಿಯನ್ನು ತಡೆಯಲು ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಜನರ ಆರ್ಥಿಕ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಮತ್ತು ಹೆಚ್ಚು ಸಾವುನೋವು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸುಧಾಕರ್ ತಿಳಿಸಿದರು.
ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ನಡೆಸಿದಾಗ ಸಹಜವಾಗಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತವೆ. ಬೆಂಗಳೂರಿನಲ್ಲಿ ನಿಧಾನವಾಗಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಇದು ಸಮಾಧಾನಕರ ಸಂಗತಿ ಎಂದರು.
ಡಿಸೆಂಬರ್‍ನಿಂದ ಫೆಬ್ರವರಿ ಅಂತ್ಯದವರೆಗೆ ಜ್ವರದ ಅವಧಿ ಹೆಚ್ಚಾಗಿರುತ್ತದೆ. ಆದರೆ ಈಗ ಜನರಲ್ಲಿ ಕಾಣಿಸಿಕೊಂಡಿರುವ ಶೀತ, ಕೆಮ್ಮು, ನೆಗಡಿ, ಜ್ವರಕ್ಕೂ ಕೋವಿಡ್‍ಗೂ ಸಂಬಂಧವಿಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಸಚಿವರು ಮನವಿ ಮಾಡಿದರು.
ಜೀವನದ ಜೊತೆಗೆ ಜೀವವೂ ಸಹ ಉಳಿಯಬೇಕು. ಸಾವು ಹೆಚ್ಚು ಸಂಭವಿಸಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಜನರ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕೊರೊನಾ ಕಟ್ಟಿ ಹಾಕಲು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಾಕಷ್ಟು ಬಾರಿ ಯೋಚಿಸಿ ಜನರಿಗೆ ತೊಂದರೆಯಾಗದಂತೆ ನಿಯಮಗಳನ್ನು ರೂಪಿಸಿದ್ದಾರೆ.ಹೆಚ್ಚುತ್ತಿರುವ ಕೋವಿಡ್ ಸೋಂಕು ತಪ್ಪಿಸಲು ಕೆಲವು ನಿಬಂಧನೆಗಳನ್ನು ಹಾಕುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಈ ವೈರಸ್ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹಬ್ಬುವುದರಿಂದ ಇಂಥ ಕ್ರಮಗಳು ಅನಿವಾರ್ಯ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಕೋವಿಡ್ ನಿಯಂತ್ರಣದಲ್ಲಿ ಸಾಕಷ್ಟು ಮುಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇಬ್ಬರ ಅಮಾನತು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಮಲ್ಲಾಪುರ ಮತ್ತು ಬೋಚಿದಾಳದಲ್ಲಿ ಮೂರು ಮಕ್ಕಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಪಡಿಸಲಾಗಿದೆ ಎಂದು ಇದೇ ವೇಳೆ ಸುಧಾಕರ್ ಸ್ಪಷ್ಟಪಡಿಸಿದರು.
ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಎರಡು ದಿನದ ಒಳಗೆ ವರದಿ ನೀಡಲು ಸೂಚನೆ ಕೊಡಲಾಗಿದೆ. ವರದಿ ಬಂದ ನಂತರ ಸತ್ಯಾಂಶ ತಿಳಿಯಲಿದೆ ಎಂದು ತಿಳಿಸಿದರು.