ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಸ್‍ವೈ ಅವರ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ (30) ತಮ್ಮ ಮನೆಯಲ್ಲಿ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಸೌಂದರ್ಯ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಸೌಂದರ್ಯ ಅವರು ಡಾ.ನೀರಜ್ ಎಂಬುವರನ್ನು ವಿವಾಹವಾಗಿದ್ದು, ಅವರಿಗೆ ಒಂದು ಮಗು ಇದೆ. ದಂಪತಿ ವಸಂತನಗರದ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು.

ವಿಷಯ ತಿಳಿಯುತ್ತಿದ್ದಂತೆ ಹಲವು ರಾಜಕೀಯ ಮುಖಂಡರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.