ಬಿಡದಿ: ಬಿಡದಿಯಲ್ಲಿ 150ಕ್ಕೂ ಹೆಚ್ಚು ಕನ್ನಡ ಮುಖಂಡರ ಜತೆ ಚರ್ಚಿಸಿದ ಮಾಜಿ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ
ನೆಲ, ಜಲ, ಭಾಷೆ ಸಮಸ್ಯೆಗಳ ನಿವಾರಣೆಗೆ ಕನ್ನಡ ಸಂಘಟನೆಗಳನ್ನು ಒಗ್ಗೂಡಿಸುವ ಪ್ರಯತ್ನ ನಡೆಸಿದ್ದಾರೆ.
ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಬಿಡದಿಯ ತಮ್ಮ ತೋಟದಲ್ಲಿ ಕನ್ನಡ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳ ಜತೆಗೆ ರೈತಪರ, ನೀರಾವರಿ ವಿಷಯಗಳನ್ನಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಅನೇಕ ಸಂಘಟನೆಗಳಿದ್ದು, ಅವರನ್ನೂ ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಹೋರಾಟ ಮಾಡಿ ಸಾಧಿಸಿಕೊಳ್ಳಬೇಕಿದೆ. ಅದಕ್ಕಾಗಿ ಪ್ರಾದೇಶಿಕ ರಾಜಕೀಯ ಶಕ್ತಿಯ ಅಗತ್ಯವಿದೆ. ಆ ದಿಕ್ಕಿನಲ್ಲಿ ನಮ್ಮ ಪಕ್ಷದ ವತಿಯಿಂದ ಇಂಥ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ಕಾರ್ಯತಂತ್ರ ರೂಪಿಸುವ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದರು.
ಮುಂದಿನ ವಾರ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಈ ಎಲ್ಲಾ ಸಂಘಟನೆಗಳೊಂದಿಗೆ ಮುಕ್ತವಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಹೇಳಿದರು.
ಕನ್ನಡಿಗರ ನಿರುದ್ಯೋಗ ಸಮಸ್ಯೆ, ಖಾಸಗೀ ಹಾಗೂ ಕೇಂದ್ರ ಸರಕಾರದ ಮಟ್ಟದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಇತ್ಯಾದಿ ವಿಷಯಗಳ ಬಗ್ಗೆ ಮುಖಂಡರಿಂದ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ರಾಜ್ಯವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎಂಬ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷದ ಸರಕಾರ ತರುವ ದಿಸೆಯಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಎಚ್ ಡಿ ಕೆ ಹೇಳಿದರು.
ಇಡೀ ದೇಶದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ಮಣೆ ಹಾಕುತ್ತಿದ್ದಾರೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕಳೆದ 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನೀರಾವರಿ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರೀ ಅನ್ಯಾಯ ಮಾಡಿವೆ ಎಂದು ಇದೇ ವೇಳೆ ಕುಮಾರಸ್ವಾಮಿ ಆರೋಪಿಸಿದರು.
ಆಡಳಿತ ಪಕ್ಷದ ಶಾಸಕರೇ ಸರಕಾರದ ಬಗ್ಗೆ ಹಾದಿಬೀದಿಯಲ್ಲಿ ಲಘುವಾಗಿ ಮಾತನಾಡುವುದು, ಮಂತ್ರಿಗಳ ಬಗ್ಗೆ ಹೇಳಿಕೆಗಳನ್ನು ನೀಡುವುದು ಉತ್ತಮ ನಡವಳಿಕೆ ಅಲ್ಲ ಎಂದು ಬಿಜೆಪಿಯವರ ಬಗ್ಗೆ ಎಚ್ ಡಿ ಕೆ ಅಭಿಪ್ರಾಯಪಟ್ಟರು.