ಮಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಸರ್ಕಾರ ಖಂಡಿತಾ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಹೇಳಿದರು.
ತಪ್ಪಿತಸ್ಥರು ಯಾರೇ ಆಗಿರಲಿ ಕಾನೂನಿನ ಪ್ರಕಾರ ಶಿಕ್ಷೆಯಾಗಲಿದೆ. ಇದರಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದರು.
ಯಾವ ಕಾರಣಕ್ಕಾಗಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಿಲ್ಲ. ಪೊಲೀಸರು ಈಗಾಗಲೇ ದೂರು ದಾಖಲಿಸಿಕೊಂಡಿದ್ದಾರೆ, ತನಿಖೆ ಕೂಡ ಮುಕ್ತವಾಗಿ ನಡೆಯಲಿದೆ. ತನಿಖೆ ನಂತರ ಸತ್ಯಾಂಶ ಹೊರಗೆ ಬರಲಿದೆ ಎಂದು ಹೇಳಿದರು.
ಆರೋಪ ಮಾಡುವುದಕ್ಕೂ ಮುನ್ನ ಹಾಗೂ ಘಟನೆ ನಡೆದ ನಂತರ ಎರಡು ಆಯಾಮಗಳಲ್ಲಿ ಪೊಲೀಸರು ತನಿಖೆ ಮಾಡುತ್ತಾರೆ. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ತಿಳಿಸಿದರು.
ಈಗಾಗಲೇ ವರಿಷ್ಠರು ಈ ಬಗ್ಗೆ ಎಲ್ಲ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಅವರಿಗೆ ಪ್ರತಿಯೊಂದು ವಿವರಗಳು ಲಭ್ಯವಿದೆ. ಆದರೆ,ನನ್ನ ಬಳಿ ಈವರೆಗೂ ಮಾತನಾಡಲಿಲ್ಲ ಎಂದು ಹೇಳಿದರು.
ನಾನು ಈಶ್ವರಪ್ಪನವರ ಜೊತೆ ಚರ್ಚಿಸುತ್ತೇನೆ. ಈ ಘಟನೆ ನಡೆದ ನಂತರ ಅವರು ನನಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಮುಖಾಮುಖಿ ಭೇಟಿಯಾಗಿ ವಿವರ ನೀಡುವಂತೆ ಸೂಚಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಹೇಳಿದರೆ ರಾಜೀನಾಮೆ ನೀಡಲು ಸಿದ್ದ ಎಂದು ಈಶ್ವರಪ್ಪ ಹೇಳಿದ್ದಾರಲ್ಲಾ ಎಂಬ ಮಾಧ್ಯಮದವರ ಪ್ರಶ್ನೆಗೆ, ಅವರು ಏನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಮುಖಾಮುಖಿ ಭೇಟಿಯಾದಾಗ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.
ಪ್ರತಿಪಕ್ಷದವರು ಅವರ ಕೆಲಸವನ್ನು ಅವರು ಮಾಡುತ್ತಾರೆ. ನಾವು ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ತನಿಖೆ ನಡೆದ ಬಳಿಕ ಸತ್ಯಾಂಶ ಹೊರಬರುತ್ತದೆ. ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.