ಹುಬ್ಬಳ್ಳಿ: ಬಿಜೆಪಿ ಸೇರುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು,ಅವರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷರು ತೀರ್ಮಾನಿಸುತ್ತಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಘೋಷಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷದೊಳಗೆ ನಡೆದ ಆಂತರಿಕ ಚರ್ಚೆಯ ಕುರಿತು ಆಕಾಂಕ್ಷಿ ಮೋಹನ ಲಿಂಬಿಕಾಯಿ ಅವರು ಏನಾದರೂ ಹೇಳಿದ್ದರೆ, ಅದಕ್ಕೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು ಜೋಶಿ.
ಪಕ್ಷದ ವ್ಯವಸ್ಥೆಯೊಳಗೆ, ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಕುರಿತು ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ತೀರ್ಮಾನ ಮಾಡುತ್ತಾರೆ ಎಂದರು.
75 ವರ್ಷ ಮೀರಿದವರನ್ನೂ ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆಯಲ್ಲಿ ಟಿಕೆಟ್ ಕೊಡುತ್ತೀರಾ ಎಂಬ ಪ್ರಶ್ನೆಗೆ, ಪಕ್ಷದ ರಾಷ್ಟ್ರೀಯ ನಾಯಕರು ಆ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಉತ್ತರಿಸಿದರು.