ಮದ್ದೂರು: ಜೆಡಿಎಸ್ ಪಕ್ಷವು ಬಿಜೆಪಿಯ ಬಿ.ಟೀಂ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಚುನಾವಣೆ ಫಲಿತಾಂಶದ ಬಳಿಕ ಉತ್ತರ ಸಿಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಿರುಗೇಟು ನೀಡಿದ್ದಾರೆ.
ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಅವರು ಮಾತನಾಡಿದರು.
ಜನತಾ ಜಲಧಾರೆ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದವರು ರಾಜಕೀಯ ಗಿಮಿಕ್ ಎಂದು ಹೇಳುತ್ತಿದ್ದಾರೆ.
ಆದರೆ ಜನತಾ ಜಲಧಾರೆಯು 5 ಅಂಶಗಳ ಯೋಜನೆಯಾಗಿದ್ದು ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ರಾಜ್ಯದ ರೈತರ ಹಿತಕಾಯಲು ರೂಪಿಸಿರುವ ಯೋಜನೆಯಾಗಿದೆ ಎಂದು ಗರಂ ಆಗಿ ಹೇಳಿದರು.
ಕಾಂಗ್ರೆಸ್ ಪಕ್ಷದವರು ಮೇಕೆದಾಟು ಯೋಜನೆಯ ಕ್ರೆಡಿಟ್ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.
ಜನತಾ ಜಲಧಾರೆ ಕಾರ್ಯಕ್ರಮ ಮೇ 13ಕ್ಕೆ ಮುಕ್ತಾಯಗೊಳ್ಳುತ್ತಿದ್ದು ಕೊನೆಯ ದಿನಗಳಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ನೀರಾವರಿ ಯೋಜನೆಗಳಿಗೆ ನಮ್ಮ ಪಕ್ಷ ಮಾಡುತ್ತಿರುವ ಹೋರಾಟಗಳನ್ನು ಜನರ ಮುಂದಿಡುತ್ತೇವೆ ಎಂದು ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಹಲವಾರು ಜನಪ್ರಿಯ ಯೋಜನೆಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್ ,ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರೂಪಿಸಿದ್ದೇವೆ ಎಂದು ಗೌಡರು ಹೇಳಿದರು.