ಫಾಜಿಲ್ ಹತ್ಯೆ ಪ್ರಕರಣ:ನಾಲ್ವರು ಅಂದರ್

ಮಂಗಳೂರು: ಸೂರತ್ಕಲ್‍ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದು,

ಕಾರಿನ ನಂಬರ್ ಪ್ಲೇಟ್ ಆಧಾರದಲ್ಲಿ ಕಾರು ಮಾಲೀಕ ಅಜಿತ್‍ಕ್ರಾಸ್ತಾ ಎಂಬಾತನನ್ನು ಎರಡು ದಿನಗಳ ಹಿಂದೆ ಬಂಧಿಸಿ ವಿಚಾರಣೆಗೊಳಪಡಿಸಿದ್ದರು.

ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಇದೀಗ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ.

ಕಳೆದ ಗುರುವಾರ ಸುರತ್ಕಲ್‍ನ ಬಟ್ಟೆ ಅಂಗಡಿಯೊಂದರ ಮುಂದೆ ಫಾಜಿಲ್ ನಿಂತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಲಾಂಗು-ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಆತನನ್ನು ಕೊಲೆ ಮಾಡಿದ್ದರು.

ಘಟನೆ ಸಂಬಂಧ ತನಿಖೆ ಕೈಗೊಂಡು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿ 51 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾಹಿತಿಗಳನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಹೇಳಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಡಿಜಿಪಿ ಪ್ರವೀಣ್ ಸೂದ್ ಅವರು ಮಂಗಳೂರಿಗೆ ಭೇಟಿ ನೀಡಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ತಪ್ಪಿತಸ್ಥರು ಯಾರೇ ಆದರೂ ಬಿಡುವುದಿಲ್ಲವೆಂದು ಅವರು ಖಡಕ್ ಸೂಚನೆ ನೀಡಿದ್ದಾರೆ.