ಚಾಮರಾಜನಗರ: ಕಬಿನಿ ಹಾಗೂ ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 85,000 ರಿಂದ 1,50,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡುವ ಸಂಭವವಿರುವುದರಿಂದ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಾಗಿ ಸುರಕ್ಷಿತ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮನವಿ ಮಾಡಿದ್ದಾರೆ.
ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 85,000 ರಿಂದ 1,50,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡುವ ಸಂಭವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಮುಳ್ಳೂರು, ಹಳೆ ಹಂಪಾಪುರ, ದಾಸನಪುರ, ಹಳೆ ಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಎಡಕುರಿಯ, ಸತ್ತೇಗಾಲ ಮುಂತಾದ ನದಿಯ ಎರಡೂ ದಂಡೆಗಳಲ್ಲಿರುವ ಗ್ರಾಮಗಳು ಹಾಗೂ ನದಿಯ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಾಗಿ ಸುರಕ್ಷಿತ ಮುನ್ನೆಚ್ಚರಿಕೆ ವಹಿಸಬೇಕು.
ನದಿ ಪಾತ್ರದಲ್ಲಿ ವಾಸಿಸುವ ಜನರು ನದಿ ನೀರಿನಲ್ಲಿ ಬಟ್ಟೆ ಒಗೆಯುವುದು, ಸ್ನಾನ ಮಾಡುವುದು, ಹಸು ತೊಳೆಯುವುದು, ಈಜುವುದು ಇನ್ನಿತರ ಚಟುವಟಿಕೆಗಳನ್ನು ಮಾಡಬಾರದು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತೆ ವಹಿಸಲು ಗ್ರಾಮಗಳಿಗೆ ಆಗಮಿಸುವ ಅಧಿಕಾರಿ, ಸಿಬ್ಬಂದಿಯವರಿಗೆ ಸಹಕರಿಸಬೇಕು. ನದಿಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು ನದಿಗೆ ಇಳಿಯಬಾರದು. ನದಿ ಬಳಿ ತೆರಳದೆ ಸುರಕ್ಷಿತವಾಗಿರಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ, ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುಪಬೇಕು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರು ಸಾರ್ವಜನಿಕರಿಗೆ ಸುರಕ್ಷಿತ ಕ್ರಮಗಳ ಕುರಿತು ಗ್ರಾಮಗಳಲ್ಲಿ ಟಾಂಟಾಂ ಸಾರಿಸಬೇಕು. ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು.
ಸುವರ್ಣಾವತಿ, ಚಿಕ್ಕಹೊಳೆ ಜಲಾಶಯ ಯಾವುದೇ ಸಮಯದಲ್ಲಿ ಭರ್ತಿ: ಚಾಮರಾಜನಗರ ತಾಲೂಕಿನ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಜಲಾಶಯದ ನೀರಿನ ಶೇಖರಣಾ ಸಾಮಥ್ರ್ಯ ಗರಿಷ್ಠ ಮಟ್ಟ ತಲುಪುವ ಹಂತದಲ್ಲಿದ್ದು, ಯಾವುದೇ ಸಮಯದಲ್ಲಿ ಜಲಾಶಯ ಭರ್ತಿಯಾಗಬಹುದಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ನದಿ ಪಾತ್ರದ ಸುತ್ತಮುತ್ತಲಿನ ಗ್ರಾಮಸ್ಥರು, ರೈತ ಬಾಂಧವರು, ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ಬಗ್ಗೆ ನಿಗಾವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮನವಿ ಮಾಡಿದ್ದಾರೆ.
ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿಯ ಅಟ್ಟುಗೂಳಿಪುರ ಗ್ರಾಮದ ಬಳಿ ಬರುವ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಇರುವ ರೈತರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಯವರು ಕೋರಿದ್ದಾರೆ.
ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿಭಾಯಿಸಲು ತಯಾರಿರಬೇಕು. ಸಾರ್ವಜನಿಕರು ತುರ್ತು ಸೇವೆಗೆ ಶುಲ್ಕ ರಹಿತ ಸಂಖ್ಯೆ 1077, ದೂ.ಸಂ 08226-223160 ಮೊ.ಸಂ 9740942901 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.