ಚಾಮರಾಜನಗರ: ಈ ಬಾರಿ ಗೌರಿ-ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಂಬಂಧ ಆಯೋಜಕರಿಗೆ ಪರವಾನಗಿ ನೀಡಲು ತಾಲೂಕುಮಟ್ಟದಲ್ಲಿ ಏಕಗವಾಕ್ಷಿ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಹಿಂದಿನ ಎರಡು ವರ್ಷಗಳಲ್ಲಿ ಕೋವಿಡ್ ಕಾರಣ ಗಣೇಶೋತ್ಸವಕ್ಕೆ ಸರ್ಕಾರ ನಿರ್ಬಂಧ ವಿಧಿಸಿತ್ತು. ಈ ಬಾರಿ ಅಂತಹ ಯಾವುದೇ ನಿರ್ಬಂಧಗಳಿಲ್ಲದಿದ್ದರೂ ಸರ್ಕಾರದ ಕೆಲ ಷರತ್ತು ಹಾಗೂ ಮಾರ್ಗಸೂಚಿಗಳನ್ನು ಅನುಸರಿಸಿ ಹಬ್ಬ ಆಚರಿಸಬೇಕಾಗಿದೆ ಎಂದು ಹೇಳಿದರು.
ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಸುಗಮಗೊಳಿಸುವ ನಿಟ್ಟಿನಲ್ಲಿ ಆಯಾ ತಾಲೂಕಿನ ತಹಶೀಲ್ದಾರ್ ನೇತೃತ್ವದಲ್ಲಿ ಏಕಗವಾಕ್ಷಿ ಯೋಜನೆಯಡಿ ಪರವಾನಗಿ ನೀಡಲು ತಾಲೂಕುಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪರವಾನಗಿ ನೀಡಲು ರಚಿಸಲಾಗಿರುವ ಸಮಿತಿಯಲ್ಲಿ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಪೊಲೀಸ್ ವೃತ್ತ ನಿರೀಕ್ಷಕರು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲೂಕು ಅಗ್ನಿಶಾಮಕ ಠಾಣಾಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಸಮಿತಿಯು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಸ್ವೀಕೃತವಾಗುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಷರತ್ತುಗಳನ್ನು ವಿಧಿಸಿ ಅನುಮತಿ ನೀಡಲಿದೆ ಎಂದು ಚಾರುಲತಾ ಹೇಳಿದರು.
ಗಣೇಶೋತ್ಸವ ಆಚರಣೆಗಾಗಿ ಪರವಾನಗಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್ ಮಟ್ಟದಲ್ಲಿ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ ಏಕಗವಾಕ್ಷಿ ವ್ಯವಸ್ಥೆ ರಚಿಸಬೇಕು.
ಆಯೋಜಕರು ನಿಗದಿತ ನಮೂನೆಯಲ್ಲಿ ಉತ್ಸವಕ್ಕೆ ಮುನ್ನ ಆಯಾ ಏಕಗವಾಕ್ಷಿ ಸಮಿತಿಗೆ ಅರ್ಜಿ ಸಲ್ಲಿಸಬೇಕು.
ಸಮಿತಿಗೆ ಸ್ವೀಕೃತವಾಗುವ ಅರ್ಜಿಗಳನ್ನು ಸಂಬಂಧಿಸಿ ಇಲಾಖೆ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿ ನಿಯಮಾನುಸಾರ ಪರಿಶೀಲಿಸಿ ಮೂರು ದಿನದೊಳಗೆ ಪರವಾನಗಿ ನೀಡಲಿದ್ದಾರೆ.
ಪರವಾನಗಿ ನೀಡುವ ಮೊದಲು ಆದೇಶದಲ್ಲಿ ನೀಡಿರುವ ಷರತ್ತುಗಳನ್ನು ಪಾಲಿಸುವ ಬಗ್ಗೆ ಆಯೋಜಕರು ಮುಚ್ಚಳಿಕೆ ನೀಡಬೇಕಿದೆ ಎಂದು ತಿಳಿಸಿದರು.
ಸಾರ್ವಜನಿಕ ಸುರಕ್ಷತೆ ಹಿತದೃಷ್ಠಿಯಿಂದ ಪರಿಸರ ಮಾಲಿನ್ಯ ಉಂಟಾಗದಂತೆ ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಆಯೋಜಕರಿಂದ ಖಾತರಿಪಡಿಸಿಕೊಳ್ಳಬೇಕು.
ಅವಶ್ಯವಿರುವ ಕಡೆ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಆಯೋಜಕರು ಎಚ್ಚರ ವಹಿಸಬೇಕು. ವಿಶೇಷವಾಗಿ ಹೈ-ಟೆನ್ಸನ್ ವಿದ್ಯುತ್ ತಂತಿ ಹಾದುಹೋಗಿರುವ ಪ್ರದೇಶದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅವಕಾಶವಿರುವುದಿಲ್ಲ.
ಶಾಂತಿ, ಸೌಹಾರ್ದತೆ ಆಚರಣೆಗೆ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮನವಿ ಮಾಡಿದರು.
ಚಾಮರಾಜನಗರ ಪಟ್ಟಣದ ಗಣಪತಿ ಉತ್ಸವ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಪದಾಧಿಕಾರಿಗಳು ನಗರದ ಹೃದಯಭಾಗದಲ್ಲಿ ಪ್ರತಿಷ್ಠಾಪಿಸಲಾಗುವ ಗಣೇಶಮೂರ್ತಿ ಉತ್ಸವಕ್ಕೆ ಈ ಹಿಂದಿನಂತೆ ಅವಕಾಶ ಹಾಗೂ ಪರವಾನಗಿ ನೀಡುವಂತೆ ಸಭೆಯಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಡಿ.ವೈ.ಎಸ್.ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಪಟ್ಟಣ ಪೊಲೀಸ್ ಠಾಣಾಧಿಕಾರಿ ತಿಮ್ಮರಾಜು, ಗಣೇಶ ಪ್ರತಿಷ್ಠಾಪನೆ ಮಂಡಳಿಯ ಅಧ್ಯಕ್ಷರಾದ ಮನೋಜ್ ಪಟೇಲ್, ಪ್ರಧಾನ ಕಾರ್ಯದರ್ಶಿ ರಾಜು ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.