ಸಿಎಂ ವಿರುದ್ದ ಎಫ್ ಐ ಆರ್ ದಾಖಲಿಸಲು ಆಗ್ರಹ

ಬೆಂಗಳೂರು: ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದ ಪ್ರಕರಣ ದಾಖಲಿಸಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ರಣದೀಪ್ ಸುರ್ಜೆವಾಲ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ಪಕ್ಷ ನೀಡಿರುವ ದೂರಿನ ಮೇಲೆ ಚುನಾವಣಾ ಆಯೋಗ ತ್ವರಿತ ಕ್ರಮ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.

ಆದರೆ ತನಿಖೆಯನ್ನು ಕೇವಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಹಗರಣದಲ್ಲಿ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಪಾತ್ರ ಪ್ರಮುಖವಾಗಿದೆ. ಹೀಗಾಗಿ ನಿಷ್ಪಕ್ಷಪಾತ ಮತ್ತು ನ್ಯಾಯಯುತ ತನಿಖೆಗಾಗಿ ಮುಖ್ಯಮಂತ್ರಿ ವಿರುದ್ಧ ಎಫ್‍ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಂಗ್ರಹಿಸಲಾದ ದತ್ತಾಂಶವನ್ನು ಖಾಸಗಿ ಆ್ಯಪ್‍ಗೆ ಅಪ್‍ಲೋಡ್ ಮಾಡಲಾಗಿದೆ. ಈ ಮೂಲಕ ದತ್ತಾಂಶ ಅಕ್ರಮವಾಗಿ ಮಾರಾಟವಾಗಿದೆ ಎಂದು ಅವರು‌ ಆರೋಪಿಸಿದ್ದಾರೆ.

ಚಿಲುಮೆ ಸಂಸ್ಥೆ 10 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಂಡು ಅಕ್ರಮವಾಗಿ ದತ್ತಾಂಶ ಸಂಗ್ರಹಿಸಿದೆ. ಇದಕ್ಕಾಗಿ ಉಪಗುತ್ತಿಗೆಯನ್ನೂ ನೀಡಿದೆ.

ಸಿಬ್ಬಂದಿಗಳಿಗೆ ವೇತನ ನೀಡಲು ಹಣ ಎಲ್ಲಿಂದ ಬಂತು, ಪ್ರಮುಖ ಆರೋಪಿ ರವಿಕುಮಾರ್ ಅಮಾಯಕ ಗ್ರಾಮಸ್ಥರ ವಿವಿಧ ಖಾತೆಗಳ ಹೆಸರಿನಲ್ಲಿ ಕೇಂದ್ರ ಸರ್ಕಾರದ ಅನುದಾನಗಳನ್ನು ಪಡೆದುಕೊಂಡಿದ್ದಾರೆ ಎಂದು ದೂರಿದ್ದಾರೆ.

ಹಣ ವರ್ಗಾವಣೆಯಲ್ಲಿ ಸರ್ಕಾರಕ್ಕೆ ಆರ್ಥಿಕ ನಷ್ಟವಾಗಿದ್ದು, ರೈತರಿಗೂ ವಂಚನೆಯಾಗಿದೆ. ಈ ಹಗರಣವನ್ನು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಗಳು ತನಿಖೆ ನಡೆಸಬೇಕು ಎಂದು ಸುರ್ಜೆವಾಲ ಆಗ್ರಹಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ, ಮತದಾರರ ಹಕ್ಕು ನಿರಾಕರಣೆ ಸೇರಿದಂತೆ ಗಂಭೀರ ಸ್ವರೂಪದ ಅಕ್ರಮಗಳು ನಡೆದಿವೆ.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರ ದತ್ತಾಂಶಗಳನ್ನು ಸಂಗ್ರಹಿಸಲಾಗಿದೆ.ಆದ್ದರಿಂದ ತನಿಖೆ ಸೀಮಿತಗೊಳ್ಳಬಾರದು.

ಚುನಾವಣಾ ಆಯೋಗ ಕೇಂದ್ರ ತನಿಖಾ ಸಂಸ್ಥೆಗಳಿಗೆ ಈ ಬಗ್ಗೆ ಸೂಚಿಸಬೇಕು ಎಂದು ಒತ್ತಾಯಿಸಿದ್ದಾರೆ.