ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ

ಮೈಸೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶಿಸಿದೆ.

ತಿ.ನರಸೀಪುರ ತಾಲ್ಲೂಕಿನ ಜಗಜೀವನ‌ರಾಮ ಗ್ರಾಮದ ಮಹದೇವ ಎಂಬಾತನಿಗೆ ಶಿಕ್ಷೆ ವಿಧಿಸಲಾಗಿದೆ.

ಈತ   2019 ಮೇ 11ರಂದು ತಮ್ಮ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ 17 ವರ್ಷದ ಬಾಲಕಿಯನ್ನು ಯಾರೂ ಇಲ್ಲದ ವೇಳೆಯಲ್ಲಿ ತನ್ನ ಮನೆಗೆ ಕರೆದುಕೊಂಡು ಬಂದು ಅಲ್ಲಿಯೇ ಉಳಿಸಿಕೊಂಡಿದ್ದ.

ಮನೆಯಲ್ಲಿ ಎಲ್ಲರೂ ಮಲಗಿದ ವೇಳೆ ರಾತ್ರಿ ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ.

ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾದ ಶೈಮ್ ಖಟ್ರೋಜ್ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಮಹದೇವನಿಗೆ 10 ವರ್ಷ ಜೈಲು ಮತ್ತು 25 ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ.

ಅಲ್ಲದೇ ದಂಡದ ಮೊತ್ತದಲ್ಲಿ ಬಾಲಕಿಗೆ 10 ಸಾವಿರ ರೂ. ನೀಡುವಂತೆ ಮತ್ತು ನೊಂದ ಅಪ್ರಾಪ್ತ ಬಾಲಕಿಯು 3 ಲಕ್ಷ ರೂ. ಪರಿಹಾರಕ್ಕೆ ಅರ್ಹಳು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಬಿ.ಜಯಂತಿ ವಾದ ಮಂಡಿಸಿದ್ದಾರೆ.