ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಕ್ಕಳ ಸ್ನೇಹಿ ಮತ್ತು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೨೦ ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಯಳಂದೂರಿನ ಮೊತ್ತ ಕೇರಿ ಬೀದಿಯ ಮಹೇಶ್ (೨೮) ಎಂಬಾತನಿಗೆ ಶಿಕ್ಷೆ ನೀಡಲಾಗಿದೆ.
ವಿವಾಹಿತನಾದ ಈತ ೮ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಯಳಂದೂರು ಠಾಣೆ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದರು.
ವಿಚಾರಣೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಶಾರಾಣಿ ಅವರು, ಸಾಕ್ಷಾಧಾರಾಗಳಿಂದ ಆರೋಪ ಸಾಬೀತಾಗಿದೆ ಎಂದು ಹೇಳಿ ಮಹೇಶನಿಗೆ ಶಿಕ್ಷೆ ವಿಧಿಸಿದ್ದಾರೆ.
ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ೪ ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ.