ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ಕೊಳ್ಳೇಗಾಲದ ಮುಖಂಡ, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಲಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ನಂಜುಂಡಸ್ವಾಮಿ,ಈ ವಿಚಾರ ಪ್ರಸ್ತಾಪಿಸಿದ್ದಾರೆ.
‘ಐದಾರು ತಿಂಗಳಿಂದ ಬಿಜೆಪಿಯಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗುವಂತಹ ಮುಜುಗರದ ವಾತಾವರಣ ನಿರ್ಮಾಣವಾಗಿದ್ದು, ಮಾನಸಿಕವಾಗಿ ತುಂಬಾ ನೋವಾಗಿದೆ. ನನ್ನ ಬೆಂಬಲಿಗರಿಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಪಕ್ಷ ತೊರೆಯುವ ತೀರ್ಮಾನಕ್ಕೆ ಬಂದಿದ್ದೇನೆ. ಭಾನುವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ’ ಎಂದರು.
‘ನಾನು 33 ವರ್ಷಗಳಿಂದ ಸ್ವಾಭಿಮಾನಿಯಾಗಿ, ಪ್ರಾಮಾಣಿಕವಾಗಿ ರಾಜಕಾರಣ ಮಾಡುತ್ತಾ ಬಂದಿದ್ದೇನೆ. ನನಗಾಗಿರುವ ನೋವನ್ನು ಬಿಜೆಪಿಯ ಜಿಲ್ಲಾ ಘಟಕದ ಮುಖಂಡರು ಹಾಗೂ ರಾಜ್ಯದ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಆದರೆ, ಯಾರೂ ಈ ಬಗ್ಗೆ ಗಮನಹರಿಸಲಿಲ್ಲ’ ಎಂದು ಅವರು ದೂರಿದರು.
‘ಮುಂದಿನ ನಡೆಯ ಬಗ್ಗೆ ಬೆಂಬಲಿಗರು, ಹಿತೈಷಿಗಳೊಂದಿಗೆ ಸಭೆ ನಡೆಸಿದ್ದೇನೆ. ಅವರ ಅಭಿಪ್ರಾಯಗಳನ್ನು ಪಡೆದಿದ್ದೇನೆ. ನನ್ನ ಮಾತೃ ಪಕ್ಷ ಕಾಂಗ್ರೆಸ್ ಗೆ ಸೇರಲು ನಿರ್ಧರಿಸಿದ್ದೇನೆ. ನನ್ನ ಗುರುಗಳು ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರೊಂದಿಗೆ ಸಮಾಲೋಚನೆ ಮಾಡಿದ್ದೇನೆ. ಬುಧವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್, ಸಿದ್ದರಾಮಯ್ಯ, ಧ್ರುವನಾರಾಯಣ ಮತ್ತಿತರ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆಗೊಳ್ಳಲಿದ್ದೇನೆ’ ಎಂದರು.