ರಮೇಶ್ ಜಾರಕಿಹೊಳಿಗೆ ಡಿ.ಕೆ.ಶಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಕುರಿತು ಆಧಾರರಹಿತವಾಗಿ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ ನೀಡಲ್ಲ ಎಂದರು

ಮಾಧ್ಯಮ ಪ್ರತಿನಿಧಿಗಳು ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾತನಾಡಿಸಿದಾಗ ಈ ರೀತಿ  ಉತ್ತರಿಸಿದರು.

ಬಿಜೆಪಿಯಲ್ಲು ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ಗರಂ ಆಗಿ ನುಡಿದರು.

ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ,ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರುಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರ ನಂತರ ನೋಡೋಣ ಎಂದು ಹೇಳಿದರು.

ಧೃವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡುವಂತೆ ಒತ್ತಡ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ,ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಧೃವನಾರಾಯಣ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ.

ಪಕ್ಷದ ನಿಷ್ಠಾವಂತ ನಾಯಕರಾದ ಧೃವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ನೀಡಿದ್ದೇನೆ ಎಂದು ತಿಳಿಸಿದರು.

ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು. ಅಲ್ಲಿ ಟಿಕೆಟ್ ಹಂಚಿಕೆ ಅಂತಿಮ ತೀರ್ಮಾನವಾಗಲಿದೆ ಎಂದು ಡಿಕೆಶಿ ತಿಳಿಸಿದರು.

ಪ್ರಧಾನಮಂತ್ರಿಗಳು ರೌಡಿ ಶೀಟರ್ ಗೆ ಕೈಮುಗಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರ ಪಕ್ಷ, ಅವರಿಗೆ ಯಾರು ಬೇಕೋ ಅವರನ್ನು ಸೇರಿಸಿಕೊಂಡಿದ್ದಾರೆ. ಅವರು ಸ್ಯಾಂಟ್ರೋ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಫೈಟರ್ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಅತ್ಯಾಚಾರಿಗಳನ್ನೇ ಜೊತೆಯಲ್ಲಿ ಇಟ್ಟುಕೊಳ್ಳಲಿ, ಅದು ಅವರ ಪಕ್ಷದ ವಿಚಾರ. ಅದರ ಬಗ್ಗೆ ನಾನು ಮಾತನಾಡಲ್ಲ ಎಂದು ಕೇಳಿದರು.