ಮೈಸೂರು: ಹಿಂದುಳಿದ ಜಿಲ್ಲೆ ಚಾಮರಾಜನಗರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಸ್ವತಃ ಚಾಣಾಕ್ಯ ಶಾ ಆಗಮಿಸಿದ್ದಾರೆ.
ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಮಂಡಕ್ಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ ನೇರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಅಮಿತ್ ಶಾ ಅವರನ್ನು ಶಾಸಕ ಎಸ್.ಎ. ರಾಮದಾಸ್, ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮೈಸೂರು ನಗರ ಕಾರ್ಯಾಧ್ಯಕ್ಷ ಹೆಚ್.ಜಿ. ಗಿರಿಧರ್, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ಮೈಸೂರು ನಗರ ಪಾಲಿಕೆ ಮೇಯರ್ ಶಿವಕುಮಾರ್ ಪುಷ್ಪಗುಚ್ಚ ನೀಡಿ ಬರಮಾಡಿಕೊಂಡರು.
ಈ ವೇಳೆ ಶಾಸಕ ಎಸ್.ಎ.ರಾಮದಾಸ್ ಅವರನ್ನು ಆತ್ಮೀಯವಾಗಿ ಆಲಂಗಿಸಿಕೊಂಡ ಅಮಿತ್ ಶಾ, ಹೇಗಿದ್ದೀರಿ, ಚೆನ್ನಾಗಿದ್ದೀರಾ ಎಂದು ಕುಶಲೋಪರಿ ವಿಚಾರಿಸಿ, ಬೆನ್ನು ತಟ್ಟಿದರು.
ಬಳಿಕ ನನ್ನ ಜೊತೆ ಬನ್ನಿ ಎಂದು ಎಸ್.ಎ.ರಾಮದಾಸ್ ರನ್ನು ಕಾರಿನಲ್ಲಿ ಕರೆದುಕೊಂಡು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ಅವರು ಶಾ ಅವರನ್ನು ಸ್ವಾಗತಿಸಿ ದೇವಸ್ಥಾನದೊಳಗೆ ಕರೆದುಕೊಂಡು ಹೋಗಿ ದೇವರ ದರ್ಶನ ಮಾಡಿಸಿದರು.
ಸುಮಾರು 15 ನಿಮಿಷಗಳ ಕಾಲ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು ಅಮಿತ್ ಶಾ.
ನಂತರ ಅಲ್ಲಿಂದ ಮತ್ತೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಹೆಲಿಕಾಪ್ಟರ್ ಮೂಲಕ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣಕ್ಕೆ ತೆರಳಿದರು.