ಮೈಸೂರಿನಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯಕ್ಕೆ ಸಚಿವ ಮಹದೇವಪ್ಪ ಚಾಲನೆ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಎಲ್ಲ ಮಹಿಳೆಯರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ನೀಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ ಮಹದೇವಪ್ಪ ತಿಳಿಸಿದರು.

ಸ್ತ್ರೀಯರ ಸಬಲೀಕರಣಕ್ಕಾಗಿ ರಚನೆಯಾಗಿರುವ ಯೋಜನೆಗಳಲ್ಲಿ ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಅತಿ ಪ್ರಮುಖವಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ವಿಭಾಗದ ವತಿಯಿಂದ ಮಹಿಳೆಯರಿಗೆ ನಗರ ಸಾರಿಗೆ ,ಸಾಮಾನ್ಯ ಸಾರಿಗೆ ಮತ್ತು ವೇಗದೂತ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತಾಡಿದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಚನೆಯಾಗಿರುವ ಕಾಂಗ್ರೆಸ್ ಸರ್ಕಾರವು ಪ್ರತಿಯೊಬ್ಬರಿಗೂ ಉತ್ತಮವಾದ ಆಡಳಿತವನ್ನು ನೀಡುತ್ತಿದೆ ಎಂದು ಹೇಳಿದರು.

ಪ್ರತಿ ಮಹಿಳೆಯರು ಕೂಡ ಸ್ವಾವಲಂಬಿಯಾಗಿ ಜೀವನ ಮಾಡಲು ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಮಾಡಲಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಸರ್ಕಾರವು ನೀಡಿರುವ ಉಳಿದ ಯೋಜನೆಗಳಾದ ಗೃಹ ಲಕ್ಷ್ಮಿ ,ಅನ್ನ ಭಾಗ್ಯ , ಯುವ ನಿಧಿ , ಗೃಹ ಜ್ಯೋತಿ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ‌ಸಚಿವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ತನ್ವಿರ್ ಸೇಠ್, ಡಿ. ತಿಮ್ಮಯ್ಯ,ಸಿ.ಏನ್. ಮಂಜೇಗೌಡ, ಹೆಚ್. ವಿಶ್ವನಾಥ್, ಜಿ. ಟಿ ದೇವೇಗೌಡ, ಕೆ. ಹರೀಶ್ ಗೌಡ, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಮಹಾ ಪೌರರಾದ ಶಿವಕುಮಾರ್, ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ, ಮಹಾನಗರ ಪಾಲಿಕೆಯ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ , ಪೊಲೀಸ್ ಕಮಿಷನರ್ ಬಿ ರಮೇಶ್ , ಪೊಲೀಸ್ ಅಧಿಕ್ಷಕಿ ಸೀಮಾ ಲಾಟ್ಕರ್ ಹಾಗೂ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿ ಹಾಜರಿದ್ದರು.