ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಷ್ಟೇ ಕಳೆದಿದೆ.ಇಷ್ಟರಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ
ಸಚಿವರು ದುರ್ನಡತೆ ತೋರುತ್ತಿದ್ದು, ಬುದ್ದಿ ಹೇಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ದೂರು ನೀಡಿದ್ದು, ಕೂಡಲೇ ಶಾಸಕಾಂಗ ಸಭೆ ಕರೆಯುವಂತೆ ಆಗ್ರಹಿಸಿದ್ದಾರೆ.
ಕಳೆದ ಶಾಸಕಾಂಗ ಸಭೆಯಲ್ಲೇ ಅಸಮಾಧಾನ ಸ್ಫೋಟಗೊಂಡಿತ್ತು. ಸಚಿವರು ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದಾರೆ ಎಂದು ಶಾಸಕಾಂಗ ಸಭೆಯಲ್ಲೇ ಶಾಸಕರು ಬೇಸರ ಹೊರಹಾಕಿದ್ದರು.
ಆದರೂ ಸಚಿವರ ವರ್ತನೆ ಬದಲಾಗದ ಕಾರಣ ಶಾಸಕರು ನೇರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.
ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಪತ್ರ ಬರೆದಿದ್ದು 20ಕ್ಕೂ ಹೆಚ್ಚು ಹಿರಿಯ ಶಾಸಕರು ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆಂದು ಗೊತ್ತಾಗಿದೆ
ಶಾಸಕರ ಪತ್ರಕ್ಕೆ ಶಾಕ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅವರ ಅಹವಾಲು ಆಲಿಸಲು ಜುಲೈ.27ರಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ.
ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾನಾಯಕ ಎನ್. ಎಸ್. ಬೋಸರಾಜು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.
ಪತ್ರ ಬರೆದಿಲ್ಲ:
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮಗೆ ಯಾವುದೇ ಶಾಸಕರು ಪತ್ರ ಬರೆದಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಸ್ಪಷ್ಟಪಡಿಸಿದ್ದಾರೆ.