ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರವಾರ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ರಾಜ್ಯದ ಹವಾಮಾನ, ಮಳೆ- ಬೆಳೆ ಸಂಬಂಧಿತ ಸ್ಥಿತಿಗತಿಗಳ ಕುರಿತು ಪರಿಶೀಲಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಸಭೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಗಿರುವ ಮಳೆಯ ಪ್ರಮಾಣ, ಮಳೆ ಹಾನಿ, ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.
ಹವಾಮಾನ ಇಲಾಖೆಯಿಂದ ಮಳೆಯ ಪ್ರಮಾಣದ ಬಗ್ಗೆ ಮಾಹಿತಿ ಇರುತ್ತದೆ. ಈ ಮಾಹಿತಿ ಆಧರಿಸಿ ಮಳೆ ಹಾನಿಯಿಂದ ಆಗುವ ಪ್ರಾಣ ಹಾನಿಯನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈ ವೇಳೆ ಸಿಎಂ ಸೂಚಿಸಿದರು.
ಜಲಪಾತಗಳು, ಜಲಾವೃತ ಆಗಿರುವ ಸೇತುವೆಗಳ ಬಳಿ ಹಾಗೂ ನದಿಗಳ ಬಳಿ ಜನರು ಹೋಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ಪ್ರವಾಹ ಉಂಟಾಗಬಹುದಾದ ಗ್ರಾಮದ ಜನರನ್ನು ಕಾಳಜಿ ಕೇಂದ್ರಗಳಿಗೆ ಶಿಪ್ಟ್ ಮಾಡಿ. ಪದೆ ಪದೆ ಪ್ರವಾಹ ಬರುವ ಗ್ರಾಮಗಳನ್ನು ಗುರುತಿಸಿ ಅವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ಜಿಲ್ಲೆಯಲ್ಲಿಯೂ ವಾರ್ ರೂಂ ತೆರೆದು ಸಹಾಯವಾಣಿ ತೆರೆಯಬೇಕು. ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ರೈತರ ಆತ್ಮ ಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು ಅಗತ್ಯವಿರುವ ಅನುದಾನ ಬಳಕೆ ಮಾಡಿಕೊಳ್ಳಿ ಎಂದು ಸಿಎಂ ಸಲಹೆ ನೀಡಿದರು.
ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಮಾತನಾಡಿ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ವಾಸ ಮಾಡಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ದೊರೆಯಬೇಕು.
ಶಾಲಾ ಅಂಗನವಾಡಿ ಕಟ್ಟಡಗಳು ಸೋರುವಂತೆ ಇದ್ದರೆ ಗುರ್ತಿಸಿ ಎಸ್ ಡಿ ಆರ್ ಎಫ್ ಅನುದಾನದಲ್ಲಿ ರಿಪೇರಿ ಮಾಡಿ ಎಂದು ಸೂಚನೆ ನೀಡಿದರು.
ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ
ಹವಾಮಾನ ಇಲಾಖೆಯ ವರದಿಯ ಪ್ರಕಾರ ಜುಲೈ 29 ರವರಿಗೆ ಉತ್ತಮ ಮಳೆಯಾಗುತ್ತದೆ. ಆಗಸ್ಟ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು ಪ್ರತಿದಿನ ಸರಾಸರಿ 42 ಟಿಎಂಸಿ ನೀರು ಜಲಾಶಯಗಳಲ್ಲಿ ಶೇಖರಣೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.