ಮೈಸೂರು ಪೇಟ ತೊಡಿಸಿ ಪ್ರಧಾನಿ ಮೋದಿ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸಂಸತ್ ಭವನಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದರು.

ಈ ವೇಳೆ ಮೋದಿಯವರಿಗೆ ಸಿದ್ದರಾಮಯ್ಯ ಅವರು ಗಂಧದ ಹಾರ ಹಾಕಿ, ಮೈಸೂರು ಪೇಟ ತೊಡಿಸಿ ಅಂಬಾರಿ ಪ್ರತಿಮೆ ಕೊಟ್ಟು ಸನ್ಮಾಸಿದರು.

ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗಿದ್ದಾರೆ.

ಭೇಟಿ ವೇಳೆ ಸಿದ್ದರಾಮಯ್ಯ ಅವರು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ನರೇಂದ್ರ ಮೋದಿ ಅವರ ಬಳಿ ಚರ್ಚೆ ನಡೆಸಿದರೆಂದು ತಿಳಿದುಬಂದಿದೆ.

ಗುರುವಾರ ಬೆಳಿಗ್ಗೆ ದೆಹಲಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಮೊದಲಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸುವಂತೆ ಮನವಿ ಮಾಡಿದ್ದಾರೆ.

ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಸಿದ್ದರಾಮಯ್ಯ ಅವರೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ‌ ಪ್ರತಿನಿಧಿ ಟಿ.ಬಿ. ಜಯಚಂದ್ರ ಹಾಜರಿದ್ದರು.