ವಿಶ್ವಾಸಮತ ಗೆದ್ದ ಪ್ರಧಾನಿ ಮೋದಿ

ನವದೆಹಲಿ: ಮಣಿಪುರ ಹಿಂಸಾಚಾರ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದೆ.

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಜು. 26ರಂದು ಪ್ರತಿಪಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದವು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅದನ್ನು ಅಂಗೀಕರಿಸಿ, ಚರ್ಚೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದರು.
ಗುರುವಾರ ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಅವರ ಭಾಷಣದ ನಂತರ, ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಲಾಯಿತು.
ನಂತರ ಧ್ವನಿಮತದ ಮೂಲಕ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಯಿತು. ಇದರೊಂದಿಗೆ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಸೋಲುಂಟಾಯಿತು.

ಭಾಷಣದ ಕೊನೆಯಲ್ಲಿ ಮಣಿಪುರ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಮಣಿಪುರ ಘಟನೆ ಬಗ್ಗೆ ಸದನದಲ್ಲಿ ಅಮಿತ್ ಶಾ ಅವರು ಮಾಹಿತಿ ನೀಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಕೇಂದ್ರ, ಮಣಿಪುರ ಸರ್ಕಾರದಿಂದ ಯತ್ನ ನಡೆಯುತ್ತಿದೆ. ಮಣಿಪುರ ರಾಜ್ಯದಲ್ಲಿ ಶಾಂತಿ ನೆಲೆಸಲಿದೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದರು.