ಮೈಸೂರು: ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಸಾರುವ ದಸರಾ ಮಹೋತ್ಸವವನ್ನು ಜನರ ಉತ್ಸವವನ್ನಾಗಿ ಅಚ್ಚುಕಟ್ಟಾಗಿ ನೆರವೇರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಉಪಸಮಿತಿಗಳ ರಚನೆ, ಕಾರ್ಯಕ್ರಮಗಳ ರೂಪುರೇಷೆ ಸಿದ್ಧತೆ ಕುರಿತು ಅರಮನೆ ಮಂಡಳಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಚಿವರು ಮಾತನಾಡಿದರು.
ಎಲ್ಲಾ ಉಪಸಮಿತಿಗಳು ಸಮನ್ವಯ ಸಾಧಿಸಿ ಅತ್ಯುತ್ತಮವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖೇನ ನಾಡಹಬ್ಬವನ್ನು ಯಶಸ್ವಿಯಾಗಿಸಬೇಕು ಎಂದು ತಿಳಿಸಿದರು.
ದೇಶ, ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ದಸರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಾರೆ.
ಪ್ರತಿಯೊಬ್ಬರಿಗೂ ನಾಡಿನ ಪರಂಪರೆ, ಕಲಾ ವೈಶಿಷ್ಟ್ಯ, ಸಂವಿಧಾನದ ಆಶಯ, ಸರ್ಕಾರದ ಐತಿಹಾಸಿಕ ಯೋಜನೆಗಳನ್ನು ತಿಳಿಸಿಕೊಡುವ ಕೆಲಸ ಮಾಡಲು ತಕ್ಷಣ ಎಲ್ಲಾ ಉಪಸಮಿತಿಗಳು ಕೆಲಸ ಪ್ರಾರಂಭಿಸಿ ಎಂದು ಹೇಳಿದರು
ದಸರಾ ಉತ್ಸವದಲ್ಲಿ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಿಗೆ ಅಳವಡಿಸುವ ದೀಪಾಲಾಂಕಾರದಿಂದ ಪ್ರವಾಸಿಗರಿಗೆ ಅತ್ಯತ್ತಮವಾದ ಸಂದೇಶ ನೀಡಬೇಕು.
ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳು ಮತ್ತು ಮಹಾನ್ ವ್ಯಕ್ತಿಗಳ ಪ್ರತಿಕೃತಿಗಳನ್ನು ಪ್ರಮುಖ ವೃತ್ತದಲ್ಲಿ ಅಳವಡಿಸಬೇಕು ಎಂದು ಸೂಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಸ್ಥಳೀಯ ಪ್ರತಿಭಾವಂತ ಕಲಾವಿದರನ್ನು ಗುರುತಿಸಿ, ಅವರಿಗೆ ಹೆಚ್ಚಿನ ಆದ್ಯತೆ ನೀಡಿ ಪ್ರೋತ್ಸಾಹಿಸಬೇಕು.
ನಾಡಿನ ಎಲ್ಲಾ ಕಲಾ ಪ್ರಕಾರಗಳನ್ನು ಜನರಿಗೆ ಪರಿಚಯ ಮಾಡಿಕೊಡುವ ಕಾರ್ಯಕ್ರಮ ಒಳಗೊಂಡಿರಬೇಕು.
ಯುವ ಜನರನ್ನು ಹೆಚ್ಚು ಆಕರ್ಷಿಸುವ ಹಾಗೂ ಅವರು ಅಧಿಕವಾಗಿ ಭಾಗವಹಿಸುವ ಯುವ ಸಂಭ್ರಮ, ಯುವ ದಸರಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು.
ಆಹಾರ ಮೇಳದಲ್ಲಿ ಶುಚಿ ಹಾಗೂ ರುಚಿಯಿಂದ ಉತ್ತಮವಾಗಿ ಆಹಾರ ತಯಾರಿಸುವವರಿಗೆ ಪ್ರಾಮುಖ್ಯತೆ ನೀಡಿ ಮಳಿಗೆ ನೀಡಬೇಕು ಎಂದು ಮಹದೇವಪ್ಪ ಆದೇಶಿಸಿದರು.
ಫಲಪುಷ್ಪ ಪ್ರದರ್ಶನವು ಪ್ರತಿಯೊಬ್ಬರನ್ನೂ ಆಕರ್ಷಿಸುವ ಕಾರ್ಯಕ್ರಮವಾಗಿದೆ. ಹಾಗಾಗಿ ಪ್ರದರ್ಶನವು ಹೆಚ್ಚಿನ ಮಟ್ಟದಲ್ಲಿ ಕಲಾತ್ಮಕತೆ ಹಾಗೂ ಸೃಜನಶೀಲತೆಯಿಂದ ಕೂಡಿರಬೇಕು ಎಂದು ಹೇಳಿದರು.
ದಸರಾ ಸಂದರ್ಭದಲ್ಲಿ ಪ್ರಮುಖವಾಗಿ ನಗರವನ್ನು ಸ್ವಚ್ಚತೆಯಿಂದಿಡಲು ನಗರ ಪಾಲಿಕೆಯು ಹೆಚ್ಚಿನ ಶ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಅಶಾದ್ ಉರ್ ರೆಹ್ಮಾನ್ ಶರೀಫ್, ಮುಡಾ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು, ಪ್ರವಾಸೋದ್ಯಮ ಉಪ ನಿರ್ದೇಶಕರಾದ ಸವಿತಾ, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಮತ್ತಿತರರು ಪಾಲ್ಗೊಂಡಿದ್ದರು.