ಕೋಟ್ಯಂತರ ರೂ ವಂಚನೆ ಆರೋಪ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ

ಬೆಂಗಳೂರು: ವಂಚನೆ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್​ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ಪಡೆದು ಚೈತ್ರಾ ವಂಚಿಸಿದ್ದಾರೆಂದು ಆರೋಪಿಸಲಾಗಿದೆ.

ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.

ಚೈತ್ರಾ ಅವರು ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್​​ ನಾಯಕರ ಜೊತೆ ನಿಕಟ ಸಂಪರ್ಕವಿದೆ, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಹೇಳಿದ್ದರು.

ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗುವ ಆಸೆಯಿಂದ ಕೇಳಿದಷ್ಟು ಹಣ ಕೊಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಅವರಿಗೆ ಟಿಕೆಟ್​ ಸಿಗಲಿಲ್ಲ.

ಹಾಗಾಗಿ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡಿಲ್ಲ.

ಇದರಿಂದ ಬೇಸರಗೊಂಡ
ಗೋವಿಂದಬಾಬು ಪೂಜಾರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.