ಗ್ಯಾರಂಟಿ ಕೂಪನ್ ಹಂಚಿ ಅಧಿಕಾರಕ್ಕೆ: ಕಾಂಗ್ರೆಸ್ ಸರಕಾರ ವಜಾಗೆ ಹೆಚ್.ಡಿ.ಕೆ ಒತ್ತಾಯ

ಚನ್ನಪಟ್ಟಣ: ಜನರಿಗೆ ಆಸೆ, ಆಮಿಷ ಒಡ್ಡಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಕೂಡಲೇ ಈ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚುಣಾವಣಾ ಆಯೋಗವನ್ನು ಒತ್ತಾಯಿಸಿದರು.

ಅಲ್ಲದೆ ಈ‌ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ತೆಗೆದುಕೊಳ್ಳ ಬೇಕು ಎಂದು ಆಗ್ರಹಿಸಿದರು.

ಚನ್ನಪಟ್ಟಣದಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು,
ಈ ಸರಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದರು.

ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್ ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿಕೆ ಮಾಡಿದ್ದಾರೆ.

ಈ ಕೂಪನ್ ಗಳ ಬಗ್ಗೆ ಆಯೋಗ ತನಿಖೆ ನಡೆಸಿ, ರಾಜ್ಯದ ಆ ಪಕ್ಷದ 135 ಶಾಸಕರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಚುನಾವಣೆ ನಡೆಸಿದ್ದೇ ಕುಕ್ಕರ್, ಇಸ್ತ್ರಿಪೆಟ್ಟಿಗೆ, ತವಾ ಹಂಚಿಕೊಂಡು, ಇದರ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಎಚ್ ಡಿ ಕೆ ಹೇಳಿದರು.

ಇದಕ್ಕೆಲ್ಲ ರಾಜ್ಯದ ಜನತೆಗೆ ಮರುಳಾಗಬೇಡಿ ಅಂದಿದ್ದೆ. ನಮ್ಮ ಚನ್ನಪಟ್ಟಣದಲ್ಲಿ ನಮ್ಮ ಜನ ಇಂಥ ಆಮಿಷಗಳಿಗೆ ಮರುಳಾಗಲಿಲ್ಲ. ಆದರೆ, ರಾಮನಗರದಲ್ಲಿ ಅದೆಲ್ಲಾ ನಡೆಯಿತು. ಅಲ್ಲಿ ಗಿಫ್ಟ್ ಕೂಪನ್ ಗಳನ್ನು ಹಂಚಿಕೆ ಮಾಡಲಾಯಿತು. ಚುನಾವಣಾ ಆಯೋಗ ಸರಿಯಾಗಿ ತನಿಖೆ ಮಾಡಿದರೆ, ಸತ್ಯ ಹೊರಬರುತ್ತದೆ ಎಂದು ತಿಳಿಸಿದರು.

ಕೇಂದ್ರ ಸರಕಾರವೂ ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಯಾವುದೇ ಕಾರಣಕ್ಕೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಇದೇ‌ ವೇಳೆ ಸ್ಪಷ್ಟಪಡಿಸಿದರು.

ಬಿಜೆಪಿ ಜತೆ ಮೈತ್ರಿ ಬಗ್ಗೆ ಚರ್ಚಿಸಲು ಗುರುವಾರ ದೆಹಲಿಗೆ ಹೋಗುತ್ತಿದ್ದೇನೆ. ಆ ಪಕ್ಷದ ಹೈಕಮಾಂಡ್ ನ ಕೆಲ ಉನ್ನತ ನಾಯಕರನ್ನು ಭೇಟಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.