ಸುತ್ತೂರು: ಸುತ್ತೂರು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಫೆಬ್ರವರಿ 6 ರಿಂದ 11ರವರೆಗೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿದೆ.
ಫೆಬ್ರವರಿ 6ರಂದು ಶ್ರೀ ವೀರಭದ್ರೇಶ್ವರ ಕೊಂಡೋತ್ಸವ, 7ರಂದು ಸಾಮೂಹಿಕ ವಿವಾಹ, ಹಾಲ್ವರವಿ ಉತ್ಸವ, 8ರಂದು ರಥೋತ್ಸವ, 9ರಂದು ಶ್ರೀ ಮಹದೇಶ್ವರ ಕೊಂಡೋತ್ಸವ ಮತ್ತು ಲಕ್ಷದೀಪೋತ್ಸವ ನೆರವೇರಲಿದೆ ಎಂದು ಸುತ್ತೂರು ಮಠದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಜೆ ಎಸ್ ಎಸ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್ ತಿಳಿಸಿದರು.
10ರಂದು ಶ್ರೀಮತಿ ಪಾರ್ವತಮ್ಮ ಮತ್ತು ಡಾ. ಶ್ರೀ ಶಾಮನೂರು ಶಿವಶಂಕರಪ್ಪ ಅತಿಥಿಗೃಹದ ಉದ್ಘಾಟನೆ ಮತ್ತು ತೆಪ್ಪೋತ್ಸವ ಹಾಗೂ 11ರಂದು ಅನ್ನಬ್ರಹೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.
ಫೆಬ್ರವರಿ 6 ರಂದು ಗ್ರಾಮೀಣ ಕಲೆಗಳಾದ ಸೋಬಾನೆಪದ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಈ ವರ್ಷ 30ನೇ ರಾಜ್ಯಮಟ್ಟದ ಭಜನಾ ಮತ್ತು ಏಕತಾರಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಮಂಜುನಾಥ್ ತಿಳಿಸಿದರು.
ವಸ್ತುಪ್ರದರ್ಶನ : ವಸ್ತುಪ್ರದರ್ಶನದಲ್ಲಿ ಕೈಗಾರಿಕೋತ್ಪನ್ನಗಳು, ಕೈಮಗ್ಗ, ಜವಳಿ, ಗ್ರಾಮೀಣ ಕರಕುಶಲ ಉತ್ಪನ್ನಗಳು, ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘಗಳು ತಯಾರಿಸಿದ ಗೃಹಬಳಕೆ ಉತ್ಪನ್ನಗಳು ಹಾಗೂ ಗುಡಿ ಕೈಗಾರಿಕೆ ವಸ್ತುಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಇರುತ್ತದೆ ಎಂದು ವಿವರಿಸಿದರು.
ಜೆಎಸ್ಎಸ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸಿದ್ಧಪಡಿಸಿದ 200ಕ್ಕೂ ಹೆಚ್ಚು ಶಿಕ್ಷಣ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳಿರುತ್ತವೆ.
ಫೆಬ್ರವರಿ 7 ರಂದು ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು ಜಾತಿ-ಮತ ಭೇದವಿಲ್ಲದೆ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ ಜತೆಗೆ ವಿವಾಹಗಳ ನೋಂದಣಿಯನ್ನು ಮಾಡಿಸಲಾಗುತ್ತದೆ.
ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರ, ವರನಿಗೆ ಪಂಚೆ, ವಲ್ಲಿ, ಷರ್ಟ್‌ಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.
ಕೃಷಿ ಮೇಳ : ಈ ವರ್ಷ ‘ಹನಿ ಹನಿಗೂ ಭರಪೂರ ತೆನೆ’ ಎಂಬ ಶೀರ್ಷಿಕೆಯಡಿ ಸಾಂಪ್ರದಾಯಿಕ ಹಾಗೂ ಆಧುನಿಕ ತಂತ್ರಜ್ಞಾನಾಧಾರಿತ ಕೃಷಿಮೇಳವನ್ನು ಆಯೋಜಿಸಲಾಗಿದೆ ಎಂದು ಮಂಜುನಾಥ್ ತಿಳಿಸಿದರು.
ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆಗಳು : 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಬೇರೆ ಬೇರೆ ವಿಭಾಗಗಳಲ್ಲಿ, ಸ್ಥಳದಲ್ಲೇ ವಿವಿಧ ವಿಷಯಗಳ ಕುರಿತು ಚಿತ್ರ ರಚಿಸುವ ರಾಜ್ಯಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆ ಮತ್ತು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಳಿಪಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಚಿತ್ರಸಂತೆ : ರಾಜ್ಯ ಹಾಗೂ ಹೊರರಾಜ್ಯ ಕಲಾವಿದರುಗಳ ಕಲಾಕೃತಿಗಳ ಪ್ರದರ್ಶನ, ಮಾರಾಟ ಹಾಗೂ ಸ್ಥಳದಲ್ಲೇ ಸಾರ್ವಜನಿಕರ ಭಾವಚಿತ್ರ ರಚನೆಮಾಡಿ ಮಾರಾಟ ಮಾಡುವ ವ್ಯವಸ್ಥೆಯ ಚಿತ್ರಸಂತೆ ಎಲ್ಲಾ ದಿನಗಳಲ್ಲೂ ಇರುತ್ತದೆ ಸಾರ್ವಜನಿಕರು ಭಾಗವಹಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜೆಎಸ್ಎಸ್ ವಿದ್ಯಾಸಂಸ್ಥೆಯ ಮತ್ತೊಬ್ಬ ಕಾರ್ಯದರ್ಶಿ ಶಿವಕುಮಾರ್, ಜಾತ್ರಾ ಮಹೋತ್ಸವದ ಕೋ ಆರ್ಡಿನೇಟರ್ ಉದಯಶಂಕರ್, ಸುಬ್ಬಪ್ಪ ಉಪಸಿತರಿದ್ದರು