ಸಚಿವ ನಾಗೇಂದ್ರ ರಾಜೀನಾಮೆ ನೀಡದಿದ್ದರೆ ಹೋರಾಟ: ಅಶೋಕ್ ಎಚ್ಚರಿಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣ ಲೂಟಿ‌‌ ಹಿನ್ನೆಲೆಯಲ್ಲಿ ‌ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕೆಂದು
ಪ್ರತಿಪಕ್ಷ ನಾಯಕ ಅಶೋಕ್ ಆಗ್ರಹಿಸಿದ್ದಾರೆ.

ಆ‌ ಹಣವನ್ನು ಕಾಂಗ್ರೆಸ್‌ ಸರ್ಕಾರ ಲೂಟಿ ಮಾಡಿದೆ,ಇದರ ಹೊಣೆಹೊತ್ತು
ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್‌ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಆರ್‌.ಅಶೋಕ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಹಣ ನುಂಗಿದ ಕಾಂಗ್ರೆಸ್‌ ಎಂಬ ಬ್ಯಾನರ್‌ ಅಡಿಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುವುದು. ದಲಿತರ ಹಣವನ್ನು ಟಕಾಟಕ್‌ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ಟಕಾಟಕ್‌ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ, ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.

ಪರಿಶಿಷ್ಟ ಪಂಗಡದ 187 ಕೋಟಿ ರೂ. ಹಣವನ್ನು ಗುಳುಂ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಚುನಾವಣೆಗೆ ಮುನ್ನ ದಲಿತರ ಉದ್ಧಾರ ಎಂದು ಕಾಂಗ್ರೆಸ್‌ ಹೇಳುತ್ತಿತ್ತು. ನಂತರ ದಲಿತರನ್ನು ಶೋಷಣೆ ಮಾಡಿದೆ. ರಾಮನ ಹೆಸರು ಕಂಡರೆ ಆಗದ ಕಾಂಗ್ರೆಸ್‌ಗೆ ವಾಲ್ಮೀಕಿ ಹೆಸರಿನ ನಿಗಮ ಕಂಡರೂ ಆಗುವುದಿಲ್ಲ. ಹೆಣ್ಣುಮಕ್ಕಳಿಗೆ ಸುರಕ್ಷತೆ ಗ್ಯಾರಂಟಿ ಇಲ್ಲವೆಂದು ಗೊತ್ತಿತ್ತು. ಈಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ ಎಂಬಂತಾಗಿದೆ ಎಂದು ಟೀಕಿಸಿದರು.

ಹಣ ವರ್ಗಾಯಿಸಲು ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರನ್‌ ಪತ್ರದಲ್ಲಿ ತಿಳಿಸಿದ್ದಾರೆ. ಜಿ.ಪದ್ಮನಾಭ್‌, ಸುಜಾ ಮೊದಲಾದ ಅಧಿಕಾರಿಗಳ ಹೆಸರನ್ನೂ ಉಲ್ಲೇಖಿಸಿದ್ದಾರೆ. ಈ ಪತ್ರದಲ್ಲಿ ಹಗರಣದ ಸಂಪೂರ್ಣ ವಿವರವನ್ನು ದಾಖಲೆಯೊಂದಿಗೆ ತಿಳಿಸಿದ್ದಾರೆ ಎಂದು ಹೇಳಿದರು.

ಮಹಿಳೆಯರ ಖಾತೆಗೆ ಟಕಾಟಕ್‌ ಎಂದು ಹಣ ಹಾಕುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ನಿಗಮದಿಂದ ಆಗಾಗ್ಗೆ ಕೋಟ್ಯಂತರ ರೂಪಾಯಿ ಟಕಾಟಕ್‌ ಆಗಿ ಕಾಂಗ್ರೆಸ್‌ನ ಲೂಟಿ ಖಾತೆಗೆ ವರ್ಗಾವಣೆಯಾಗಿದೆ. 25 ಸಾವಿರ ಕೋಟಿ ರೂ. ದಲಿತರ ಹಣ ಟಕಾಟಕ್‌ ಎಂದು ಕಾಣೆಯಾಗಿದೆ. ಬಿತ್ತನೆ ಬೀಜಗಳ ದರ ಟಕಾಟಕ್‌ ಎಂದು ಏರಿಕೆಯಾಗಿದೆ. ಭಯೋತ್ಪಾದನೆ ಟಕಾಟಕ್‌ ಎಂದು ಮೇಲೆದ್ದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಹಿಂದೆ ಕೆ.ಎಸ್‌.ಈಶ್ವರಪ್ಪನವರ ಮೇಲೆ ಆರೋಪ ಬಂದಾಗ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಪ್ರಶ್ನೆ ಕೇಳಿದ್ದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರಂತೂ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದರು. ಈಗ ಡೆತ್‌ನೋಟ್‌ನಲ್ಲಿ ಸಚಿವರ ಹೆಸರಿದ್ದರೂ ಯಾವುದೇ ಕ್ರಮ ವಹಿಸಿಲ್ಲ, ಮುಖ್ಯಮಂತ್ರಿಗಳಿಗೆ ಮಾನ ಮರ್ಯಾದೆ ಇಲ್ಲ. ಈಗಲೂ ಸಚಿವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಿ ಎಂದು ಅಶೋಕ್ ಒತ್ತಾಯಿಸಿದರು.