ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ; ಹಿಂದೂಗಳಿಗೆ ಮಾನಸಿಕ ಹಿಂಸೆ- ಅಶೋಕ್

ಬೆಂಗಳೂರು:ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದರು.

ಇದೆಲ್ಲದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಈ ಸರ್ಕಾರಕ್ಕೆಬುದ್ಧಿ ಕಲಿಸಲಿದೆ ಎಂದು  ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ‌ ಹಿಡಿದಿದೆ ಅಂತ ಕಾಣುತ್ತೆ, ಅದಕ್ಕಾಗಿಯೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ನಮ್ಮ ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ ಎಂದು ಕಿಡಿಕಾರಿದರು.

ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ, ಆದರೆ ಇದಕ್ಕೆ ಯಾವುದೇ ದಾಖಲೆ ಇಲ್ಲ, ಬಿಜೆಪಿ ಕಾರ್ಯಕರ್ತರು ಭಾರತ್‌ ಮಾತಾ ಕೀ ಜೈ ಎಂದಿದ್ದರು. ಆದರೂ ಮುಸ್ಲಿಮರನ್ನು ರಕ್ಷಣೆ ಮಾಡಿ ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು‌ ಎಂದು ಅಶೋಕ್ ತಿಳಿಸಿದರು.

ಚಿತ್ರನಟ ದರ್ಶನ್‌ ಪೊಲೀಸರಿಗೆ ದೂರು ನೀಡಿ ರೇಣುಕಾಸ್ವಾಮಿಗೆ ತಿಳಿ ಹೇಳಿಸಬಹುದಿತ್ತು, ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂದಿದ್ದರೆ ಅದು ದೊಡ್ಡ ತಪ್ಪು, ಕಾನೂನಿಗಿಂತ ಯಾರೂ ದೊಡ್ಡವರಲ್ಲ, ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದರಲ್ಲದೆ, ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸಿದರು.

ರಾಜ್ಯದಲ್ಲಿ ಅಪರಾಧಿ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆಗೆ ಬೆಂಕಿ ಹಾಕಲಾಗಿದೆ,ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ, ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ,ಆದ್ದರಿಂದ ಪೊಲೀಸ್‌ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ‌ ಎಂದು ಟೀಕಿಸಿದರು.

ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ ಎಂದು ಅಶೋಕ್ ಒತ್ತಾಯಿಸಿದರು.

ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ, ಇಂತಹ ಕ್ಷುಲ್ಲಕ ವಿಚಾರಕ್ಕೆ ಕೊಲೆ ಮಾಡಿರುವುದು ಇಡೀ ಚಿತ್ರೋದ್ಯಮಕ್ಕೆ ಕಳಂಕ,ಸರ್ಕಾರ ಮಾನವೀಯತೆ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಸಲಹೆ ನೀಡಿದರು.