ಬೆಂಗಳೂರು ವಿಶ್ವವಿಖ್ಯಾತವಾಗಲು ನಾಡ ಪ್ರಭು ಕಾರಣ: ಸಿಎಂ ಬಣ್ಣನೆ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ನಾಡಪ್ರಭು ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆಂಪೇಗೌಡರ ಜಯಂತಿ ಪ್ರಯುಕ್ತ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ  ಮಾಲಾರ್ಪಣೆಮಾಡಿ ನಂತರ ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ 515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳಾಗಿದ್ದರು ಎಂದು ಹೇಳಿದರು.

ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು,ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ,ಕೆರೆಗಳು ನಿರ್ಮಾಣವಾಯಿತು,ವೃತ್ತಿಯಾಧಾರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟ ರು ಎಂದು ಸಿಎಂ ತಿಳಿಸಿದರು.

ಮೊದಲಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸಿದ್ದರಾಮಯ್ಯ ಸ್ಮರಿಸಿದರಲ್ಲದೆ ಕೆಂಪೇಗೌಡರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದು ಹೇಳಿದರು.