ಮೈಸೂರು: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಕುಮಾರಸ್ವಾಮಿ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಹೇಗೆ, ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ,ಸಿಡಿ ಫ್ಯಾಕ್ಟರಿ ಬಂದ್ ಆಯ್ತಲ್ಲಾ ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ವ್ಯಂಗ್ಯ ವಾಡಿದರು.
ಬಿಜೆಪಿಯವರು ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಹೊರಗಡೆ ಬರಲು ಕಾಂಗ್ರೆಸ್‌ನವರೇ ಒಳಗಡೆ ಕುಮ್ಮಕ್ಕು ನೀಡುತ್ತಿದ್ದಾರೆ,ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಈಗ ಶಾಸಕರಾಗಿದ್ದಾರೆ. ಅವರು ಸಿಎಂ ಪರ ಸುದೀರ್ಘವಾಗಿ ಮಾತನಾಡಿ 62 ಕೋಟಿ ರೂ. ಪರಿಹಾರ ನೀಡಬೇಕು ಎಂದಿದ್ದಾರೆ. ಹಲವು ಕಡೆ ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದ್ದರೂ ಆ ರೈತರು ಇನ್ನೂ ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರ ಜಾಗಕ್ಕೆ ದರ ನಿಗದಿ ಮಾಡುವಾಗ ಹೀಗೆ ಮಾಡುತ್ತೀರಾ, ನಿಮ್ಮ ಪತ್ನಿಯ ಹಣ ಕೇಳುತ್ತಿದ್ದೀರಲ್ಲ, ದೇವರು ಮೆಚ್ಚುತ್ತಾನಾ ಎಂದು ಕುಮಾರಸ್ವಾಮಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.