ಮಂಡ್ಯ: ಬಿಜೆಪಿ, ಜೆಡಿಎಸ್ ಪಕ್ಷದವರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ ಅದು ನನಸಾಗದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟಾಂಗ್ ನೀಡಿದರು.
ಮಂಡ್ಯದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಲೇ ಬಂದಿದೆ,
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಕೊಡುಗೆ ಏನೇನೂ ಇಲ್ಲಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎರಡನೇ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸದೆ ಇಲ್ಲ ಸಲ್ಲದ ಆರೋಪ ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಸಿದರು.
ಇಂದಿರಾಗಾಂಧಿ ಪ್ರಧಾನಿಯಾಗಿದ್ದ ವೇಳೆ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ, ಜನ ಸಾಮಾನ್ಯರಿಗೂ ಸಾಲ ಸಿಗುವಂತೆ ಮಾಡಿದರು. ಆದರೆ, ಇಂದಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ದೇಶದ ಬ್ಯಾಂಕ್ ಗಳನ್ನೇ ಖಾಸಗೀಕರಣ ಮಾಡುತ್ತಿದೆ ಎಂದು ದೂರಿದರು.
ಈ ಹಿಂದೆ ವಿಧಾನ ಪರಿಷತ್ ನಲ್ಲಿ ಬಿಎಸ್ ಯಡಿಯೂರಪ್ಪ ಅವರೇ, ಮುಡಾದಲ್ಲಿ ದೇವೇಗೌಡ, ಕುಮಾರಸ್ವಾಮಿ ಕುಟುಂಬಕ್ಕೆ ಸೈಟ್ ಹಂಚಲಾಗಿದೆ ಎಂದು ಆರೋಪಿಸಿದ್ದರು. ಆದರೆ, ಈಗ ಕುಮಾರಸ್ವಾಮಿ, ವಿಜಯೇಂದ್ರ ಅವರೇ ಒಟ್ಟಾಗಿ ಪಾದಯಾತ್ರೆ ನಡೆಸುತ್ತಿರುವುದು ವಿಪರ್ಯಾಸ ಎಂದು ಟಾಂಗ್ ನೀಡಿದರು.
ಜನಾಂದೋಲನ ಕಾರ್ಯಕ್ರಮ ದಲ್ಲಿ ಸಚಿವರು, ಶಾಸಕರು, ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.