ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ ನಮ್ಮ‌ಅಭಿನಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಸಿದ್ದು‌ ಮಾತನಾಡಿದರು.

ಇದು ನಿಮ್ಮೆಲ್ಲರ ಸರ್ಕಾರ, ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿರುತ್ತದೆ ಎಂದು ಹೇಳಿದರು.

ಸರ್ಕಾರ ಅಂದ್ರೆ ಎಲ್ಲಾ ಸರ್ಕಾರಿ ನೌಕರರೂ ಸೇರುತ್ತಾರೆ. ನೀವೆಲ್ಲಾ ಒಟ್ಟು ಸೇರಿದರೆನೇ ಸರ್ಕಾರ ಎಂದು ತಿಳಿಸಿದರು.

ಅಂಬೇಡ್ಕರ್ , ಗಾಂಧಿ, ಬಸವಾದಿ ಶರಣರು ಸಮ‌ ಸಮಾಜದ ಕನಸು ಕಂಡಿದ್ದರು‌. ಇವರೆಲ್ಲರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮೆಲ್ಲರ ಮೇಲೂ ಇದೆ. ಇದಕ್ಕಾಗಿ ಶ್ರಮಿಸೋಣ ಎಂದು ಸಿಎಂ ಕರೆ ನೀಡಿದರು.

ಸಮ ಸಮಾಜದ ಆಶಯದಿಂದ ಸರ್ಕಾರ ಜಾರಿ ಮಾಡುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ನಿಮ್ಮಗಳ ಮೇಲಿದೆ. ಶೋಷಿತ ಸಮುದಾಯಗಳ ಮನೆ ಬಾಗಿಲಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿದಾಗ ಮಾತ್ರ ನಮ್ಮ ನಿಮ್ಮ ಶ್ರಮ ಸಾರ್ಥಕವಾಗುತ್ತದೆ.

ನಿಮ್ಮೆಲ್ಲರ ಬೇಡಿಕೆಯಂತೆ ಒಪಿಎಸ್ ಮತ್ತು ಆರೋಗ್ಯ ಸಂಜೀವಿನಿ ಕಾರ್ಯಕ್ರಮದ ಬಗ್ಗೆ ನಮ್ಮ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ನಿಮ್ಮ ಜೊತೆ ಇರುತ್ತೇನೆ, ನಾವು-ನೀವು ಒಟ್ಟಾಗಿ ಜನರ ಜೊತೆ ಇದ್ದು, ಜನರ ಋಣ ತೀರಿಸೋಣ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಶಾಸಕ ಪ್ರಕಾಶ್ ರಾಥೋಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.