ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸೋಮವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೂಡಲೇ ಬೇರೆ ರಾಜ್ಯಕ್ಕೆ ವರ್ಗಾವಣೆ ಮಾಡಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು.
ಪ್ರತಿಭಟನೆ ನಂತರ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ರಾಜ್ಯಪಾಲರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಮುಖಂಡರು ಇಂದು ಕರೆ ನೀಡಿದ್ದ ಟಿ ನರಸಿಪುರ ಬಂದ್ ಬಹುತೇಕ ಯಶಸ್ವಿಯಾಯಿತು.
ಅಂಗಡಿ ಮುಂಗಟ್ಟುಗಳನ್ನು ಮತ್ತು ಖಾಸಗಿ ಕಚೇರಿಗಳನ್ನು ಮುಚ್ಚಲಾಗಿತ್ತು, ಬೆರಳೆಣಿಕೆಯಷ್ಟು ವಾಹನ ಸಂಚಾರವಿದ್ದುದು ಕಂಡು ಬಂದಿತು.
ಇದೇ ವೇಳೆ ಬನ್ನೂರಿನಲ್ಲೂ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ನಡೆಯನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಪ್ರತಿಭಟನೆ ನಡೆಸಿದರು.