ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ಪ್ರತಿಪಕ್ಷದ ನಾಯಕ ಅಶೋಕ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ತಿರುಗೇಟು ನೀಡಿದರು.
ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇರುತ್ತದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದು ಹೇಳಿದರು.
ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು. ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕಿತ್ತು, ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ ಎಂದು ಹೇಳಿದರು.
ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ,ಅಂತಹ ಅವಶ್ಯಕತೆ ನಮಗಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಮೊದಲಿನಿಂದಲೂ ಹಿಂದೂಗಳಿಗೆ ರಕ್ಷಣೆ ಇಲ್ಲ. ಬಾಂಗ್ಲಾದಂತೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಐವನ್ ಡಿಸೋಜ ಹೇಳಿದ್ದಾರೆ. ಅದಕ್ಕೆ ಹಿರಿಯ ನಾಯಕರು ಏನೂ ಸ್ಪಷ್ಟನೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅರಮನೆ ಮೈದಾನದಲ್ಲಿ ನಡೆದ, ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಆರ್.ಅಶೋಕ, ಕಾಂಗ್ರೆಸ್ ನಲ್ಲಿ ಕುಟುಂಬದ ಕುಡಿ ಇದ್ದರೆ ಮಾತ್ರ ಇಡೀ ಪಕ್ಷ ಜೀವಂತವಾಗಿರುತ್ತದೆ. ಆದರೆ ಬಿಜೆಪಿ ಕಾರ್ಯಕರ್ತರಿಂದ ನಡೆಯುವ ಪಕ್ಷ. ಇಲ್ಲಿ ಕಾರ್ಯಕರ್ತರೇ ಮುಖ್ಯ. ಸದಸ್ಯತ್ವದ ಅಭಿಯಾನ ಮಾಡಿದರೆ ಒಬ್ಬ ವ್ಯಕ್ತಿಯನ್ನು ಬಿಜೆಪಿಗೆ ಬದ್ಧತೆಯಿಂದ ಸೇರಿಸಿದಂತಾಗುತ್ತದೆ ಎಂದರು.