ಬೆಂಗಳೂರು 23: ಬಿಡಿಎ ಅಪಾರ್ಟ್ಮೆಂಟ್ ಕಾಮಗಾರಿಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕುಟುಂಬ ಸದಸ್ಯರು ಲಂಚ ಪಡೆದಿರುವ ಆರೋಪ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಬುಧವಾರ ಡಿಕೆಶಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಪಾರ್ಟ್ಮೆಂಟ್ ಕಾಮಗಾರಿಯಲ್ಲಿ ಬಿಡಿಎ ಆಯುಕ್ತರ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬ ಸದಸ್ಯರು ಲಂಚ ಪಡೆದಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಹಾಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರು ಅಥವಾ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಬೇಕು ಎಂದವರು ಹೇಳಿದರು.
ಈ ಪ್ರಕರಣದ ತನಿಖೆ ನಡೆಯುವವರೆಗೂ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಡಿಕೆಶಿ ಒತ್ತಾಯಿಸಿದರು.
ಈ ಬಾರಿ ಆರ್ ಟಿಜಿಎಸ್ ಮೂಲಕ ಪಡೆದಿರುವ ಯಡಿಯೂರಪ್ಪನವರು ಈ ಹಿಂದೆ ಚೆಕ್ ಮೂಲಕ ಲಂಚ ಪಡೆದಿದ್ದರು ಎಂದರು.
ಈ ಪ್ರಕರಣ ತನಿಖೆಯಾಗುವವರೆಗೂ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೇ ಪ್ರಧಾನಿ ನರೇಂದ್ರ ಮೋದಿ ಅವರೇ ಅವರನ್ನು ಈ ಸ್ಥಾನದಿಂದ ತೆಗೆದು ಹಾಕಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.