ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ, ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್ ಸರ್ಕಾರ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು.
ಮಾಧ್ಯಮ ದವರೊಂದಿಗೆ ಮಾತನಾಡಿದ ಅಶೋಕ್, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು, ಬಾಂಗ್ಲಾದೇಶದಿಂದಲೂ ಹಲವರು ಆಧಾರ್ ಕಾರ್ಡ್ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ ಎಂದು ಅಶೋಕ್ ಎಚ್ಚರಿಸಿದರು.
ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್ ಸಚಿವರು ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ನೀಡಿದ್ದಾರೆ, ಇದರಿಂದಾಗಿ ಭಯೋತ್ಪಾದನೆಗೆ ಕುಮ್ಮಕ್ಕು ದೊರೆತಿದೆ, ಕರ್ನಾಟಕದಲ್ಲೇ ಭಯೋತ್ಪಾದನೆ ಮಾಡಿದರೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ.ಹಾಗಾಗಿಯೇ ಇಲ್ಲಿ ಹೆಚ್ಚು ಉಗ್ರ ಚಟುವಟಿಕೆ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು. ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ, ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು, ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್ ಮಾಡಲಾಗಿತ್ತು ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್ ನಾಯಕರಿಗೆ ಹೆಚ್ಚಿನ ವಿಶ್ವಾಸವಿದೆ. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಹೆಚ್ಚಿದ್ದು,ಅಭಿವೃದ್ಧಿ ಚಟುವಟಿಕೆ ನಡೆಯುತ್ತಿಲ್ಲ ಎಂದು ಇದೇ ವೇಳೆ ಅಶೋಕ್ ಟೀಕಾಪ್ರಹಾರ ನಡೆಸಿದರು.