ನವದೆಹಲಿ: ರಾಹುಲ್ ಗಾಂಧಿ ಹೇಳಿಕೆಯಿಂದ ಮತ್ತೊಮ್ಮೆ ಕಾಂಗ್ರೆಸ್ನ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.
ಮೀಸಲಾತಿ ವಿಚಾರದ ಬಗ್ಗೆ ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದನ್ನು ಉಲ್ಲೇಖಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಶಾ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶವನ್ನು ವಿಭಜಿಸುವ ಷಡ್ಯಂತ್ರ ರೂಪಿಸುವ ಶಕ್ತಿಗಳೊಂದಿಗೆ ನಿಂತು ದೇಶ ವಿರೋಧಿ ಹೇಳಿಕೆ ನೀಡುವುದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿ ಹೋಗಿದೆ ಎಂದು ಜರಿದಿದ್ದಾರೆ.
ಕಾಶ್ಮೀರದಲ್ಲಿ ದೇಶ ವಿರೋಧಿ ನ್ಯಾಷನಲ್ ಕಾನ್ಫರೆನ್ಸ್ ಬೆಂಬಲಿಸಿರುವ ಕಾಂಗ್ರೆಸ್ ಈಗ ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿದೆ. ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭಾವನೆಗಳನ್ನು ಘಾಸಿಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ.
ರಾಹುಲ್ ಗಾಂಧಿಯವರ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಉಂಟುಮಾಡುವ ಕಾಂಗ್ರೆಸ್ನ ರಾಜಕೀಯವನ್ನು ಬಯಲು ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಬಿಜೆಪಿ ಇರುವವರೆಗೂ ಯಾರೊಬ್ಬರೂ ಮೀಸಲಾತಿಯನ್ನು ರದ್ದುಪಡಿಸಲು ಸಾಧ್ಯವಿಲ್ಲ ಅಥವಾ ರಾಷ್ಟ್ರದ ಭದ್ರತೆಯೊಂದಿಗೆ ಯಾರೂ ಗೊಂದಲಕ್ಕೀಡಾಗಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಕಟುವಾಗಿ ಹೇಳಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಜಾರ್ಜ್ಟೌನ್ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗಿನ ಸಂವಾದ ನಡೆಸಿದ್ದಾಗ ಮೀಸಲಾತಿಯು ಎಷ್ಟು ಕಾಲ ಮುಂದುವರಿಯಲಿದೆ ಎಂಬ ಪ್ರಶ್ನೆಗೆ ರಾಹುಲ್ ಗಾಂಧಿ, ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದಾಗ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಕಾಂಗ್ರೆಸ್ ಪಕ್ಷವು ಆಲೋಚನೆ ಮಾಡಲಿದೆ. ಈಗ ಸಮಾನತೆಯ ಪರಿಸ್ಥಿತಿ ಇಲ್ಲ ಎಂದು ಉತ್ತರಿಸಿದ್ದನ್ನು ಸ್ಮರಿಸಬಹುದು.