ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
82ನೇ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರು ಮುನಿರತ್ನ ಅವರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿ ದ್ದಾರೆ.
ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು.
ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು.
ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದರು.