ದೇಶದಲ್ಲಿ ರೇಷ್ಮೆ ಬೆಳೆ ಬೃಹತ್ ಉದ್ಯಮವಾಗಿ ಬೆಳೆದಿದೆ-ಹೆಚ್ ಡಿ ಕೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರ ಸ್ವಾಮಿ ತಿಳಿಸಿದರು.

ರೇಷ್ಮೆ ಉದ್ಯಮ ದೇಶದ ಜಿ ಡಿಪಿ ಬೆಳವಣಿಗೆಗೆ ಉತ್ತಮ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ಶುಕ್ರವಾರ ಕೇಂದ್ರ ರೇಷ್ಮೆ ಮಂಡಳಿ ವತಿಯಿಂದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ 27 ರಾಜ್ಯಗಳ ರೈತರು ತಮ್ಮನ್ನು ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೂಡಾ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಮೈಸೂರು ಭಾಗದಲ್ಲಿ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚು ಎಂದು ತಿಳಿಸಿದರು.

ಚೀನಾದಲ್ಲಿ ಹೆಚ್ಚು ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ರೇಷ್ಮೆ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು 1.52 ಲಕ್ಷ ಕೋಟಿ ಹಣವನ್ನು ಕೃಷಿ ಕ್ಷೇತ್ರಕ್ಕೆ ನೀಡುತ್ತಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬಂದಿಸಿದ ಚರ್ಚೆಗಳು ನಡೆಯುತ್ತವೆ. ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ,ಅದಕ್ಕಾಗಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ರೈತರು ಆತ್ಮ ವಿಶ್ವಾಸದಿಂದ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಶ್ಯಾಮ್ ಪ್ರಕಾಶ್ ಮುಖರ್ಜಿ ಅವರ ದೂರ ದೃಷ್ಟಿಯಿಂದ ಕೇಂದ್ರೀಯ ರೇಷ್ಮೆ ಮಂಡಳಿ ಪ್ರಾರಂಭವಾಯಿತು. ಈ ಮಂಡಳಿಯ ಪ್ರಾರಂಭದಿಂದ ರೇಷ್ಮೆ ಬೆಲೆಯಲ್ಲಿ ಹಲವು ಆವಿಷ್ಕಾರ ಆಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಜವಳಿ ಖಾತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಮಾತನಾಡಿ ಮೈಸೂರಿನ ರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರಿಗೆ ರೇಷ್ಮೆಯನ್ನು ಪರಿಚಯಿಸಿದರು. ಮೈಸೂರು ರೇಷ್ಮೆ ಸೀರೆಗಳು ಇಂದು ವಿಶ್ವ ಪ್ರಸಿದ್ಧಿಯನ್ನು ಪಡೆದಿವೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು ರೇಷ್ಮೆ ಉದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.

ಚೈನಾದ ರೇಷ್ಮೆ ಯಿಂದ ಭಾರತದ ರೇಷ್ಮೆ ಗೆ ಬೆಲೆ ಕಡಿಮೆ ಇದೆ. ಆದರೆ ಮುಂದಿನ ದಿನಗಳಲ್ಲಿ ಚೈನಾದ ರೇಷ್ಮೆ ಕಡಿಮೆ ಆಗುತ್ತದೆ ಅಲ್ಲಿ ಕೆಲಸಗಾರರ ಕೊರತೆ ಉಂಟಾಗುತ್ತಿದೆ. ಇದರಿಂದ ಭಾರತದ ರೇಷ್ಮೆಗೆ ಉತ್ತಮ ಬೆಲೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಬೆಳೆಯನ್ನು ಬೆಳೆಯುವುದರಿಂದ ರೈತರು ಉತ್ತಮ ಆದಾಯ ಗಳಿಸಬಹುದಾಗಿದೆ. ದೇಶದ ರೇಷ್ಮೆ ಬೆಳೆಗಾರರ ಹಿತ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಗಿರಿರಾಜ್ ಸಿಂಗ್ ಭರವಸೆ ನೀಡಿದರು.

ಕೇಂದ್ರ ಜವಳಿ ರಾಜ್ಯ ಸಚಿವರಾದ ಪವಿತ್ರ ಮಾರ್ಗರೇಟ್ ಕನ್ನಡ ಭಾಷೆಯು ಹೆಚ್ಚು ಶ್ರೀಮಂತವಾದ ಬಾಷೆಯಾಗಿದೆ. ರೇಷ್ಮೆ ಬೆಳೆಯು ಅಬಿವೃದ್ದಿ ಹೊಂದಲು 1949 ರಿಂದ ರೇಷ್ಮೆ ಮಂಡಳಿಯ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ, ಇದು ಗ್ರಾಮೀಣ ಜನರ ಹಾಗೂ ಮಹಿಳೆಯರ ನೆಚ್ಚಿನ ಬೆಳೆಯಾಗಿದೆ. ಇದರಿಂದ ಗ್ರಾಮಿಣ ಜನರ ಆದಾಯವನ್ನು ಹೆಚ್ಚಿಸುತ್ತಿದೆ ಎಂದು ತಿಳಿಸಿದರು.

ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ಅವರು ಮಾತನಾಡಿ ರೇಷ್ಮೆ ಕರ್ನಾಟಕ ರಾಜ್ಯದಲ್ಲಿ ಪ್ರತಿಷ್ಠಿತ ಬೆಳೆಯಾಗಿದೆ. ಕೇಂದ್ರ ಸರಕಾರದಿಂದ ರೇಷ್ಮೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ರೇಷ್ಮೆ ಬೆಳೆಗಾರರಿಗೆ ಅನುಕೂಲಕರವಾದ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಎಂದು ಮನವಿ ಮಾಡಿದರು.

ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ ಮೈಸೂರಿಗೂ ರೇಷ್ಮೆ ಗೂ ಅವಿನಾಭಾವ ಸಂಬಂಧ ಇದೆ. ವಿಜಯನಗರ ಅರಸರ ಕಾಲದಿಂದ ರೇಷ್ಮೆ ಇಲ್ಲಿ ಪ್ರಚಲಿತದಲ್ಲಿ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರೇಷ್ಮೆ ಬೆಳೆಯ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ರೇಷ್ಮೆ ಬೆಳೆಗೆ ಪ್ರೋತ್ಸಾಹ ನೀಡಲು ಎಲ್ಲಾ ರೀತಿಯ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯರಾದ ಡಾ. ಕೆ ಸುಧಾಕರ್ ಮಾತನಾಡಿ ಶಿಡ್ಲಘಟ್ಟದಲ್ಲಿ ಹೈಟೆಕ್ ಮಾರುಕಟ್ಟೆಯನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಜವಳಿ ಇಲಾಖೆಯ ಕಾರ್ಯದರ್ಶಿ ರಚನಾ ಷಾ,ರಾಜ್ಯ ಸಭಾ ಸದಸ್ಯ ನಾರಾಯಣ್ ಕೊರಗಪ್ಪ,ಶಾಸಕ ಜಿ. ಟಿ ದೇವೇಗೌಡ,ರೇಷ್ಮೆ ಇಲಾಖೆ ಆಯುಕ್ತ ರಾಜೇಶ್ ಗೌಡ, ಕೇಂದ್ರ ಜವಳಿ ಇಲಾಖೆಯ ಜಂಟಿ ಕಾರ್ಯದರ್ಶಿ ಪ್ರಜಕ್ತ ಎಲ್ ವರ್ಮ ಮತ್ತಿತರ ಅಧಿಕಾರಿಗಳು,ರೈತರು ಉಪಸ್ಥಿತರಿದ್ದರು.