ಮೈಸೂರು: ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಹೇಳಿದರು.
ಮೈಸೂರು ಜಿಲ್ಲಾಡಳಿತದ ವತಿಯಿಂದ ನಗರದ ಓವಲ್ ಮೈದಾನದಲ್ಲಿ ಆಯೋಜಿಸ ಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಗೆ ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ ಎಂದವರು ತಿಳಿಸಿದರು.
ಪ್ರಾಚೀನ ಕಾಲದಿಂದಲೂ ಶಾಸನಗಳಲ್ಲಿ ಕನ್ನಡ ಭಾಷೆ ಬಳಕೆಯಾಗಿರುವುದು ಕಂಡು ಬರುತ್ತದೆ. ಕನ್ನಡ ಭಾಷೆ ಮಾತನಾಡುವವರು ಕಾವೇರಿಯಿಂದ ಗೋದಾವರಿಯವರೆಗೆ ಇರುವುದನ್ನು ಕಾಣುತ್ತೇವೆ ಎಂದು ಅವರು ಹೇಳಿದರು.
ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ನಮ್ಮ ಸರ್ಕಾರ ಇಂದು ಹೆಚ್ಚಿನ ಪ್ರಾಮುಖ್ಯತೆ ನೀಡಿದೆ ಎಂದು ಹೇಳಿದ ಸಚಿವರು, ಕನ್ನಡ ಭಾಷೆಯ ಶ್ರೀಮಂತಗೊಳಿಸು ವಿಕೆಯೊoದಿಗೆ ಸಾಹಿತ್ಯ ಹಾಗೂ ಸಂಸ್ಕೃತಿಗಳ ಉತ್ತೇಜನಕ್ಕೂ ನಮ್ಮ ಸರಕಾರವು ಸಾಕಷ್ಟು ಒತ್ತು ನೀಡಿದೆ ಎಂದರು.
ತಂತ್ರಜ್ಞಾನದ ವೇಗದಲ್ಲಿ ಹಾಗೂ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಭಾಷೆಯು ಹಿಂದುಳಿಯದoತೆ ಸರಕಾರವು ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಕನ್ನಡದಲ್ಲಿ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕಗಳು, ಚರವಾಣಿ (ಮೊಬೈಲ್‌ನಲ್ಲಿ) ಕನ್ನಡ ಬಳಕೆ, ಬ್ರೈಲ್ ಲಿಪಿಯಲ್ಲಿ ಕನ್ನಡ ಬಳಕೆ ಮತ್ತಿತರ ತಂತ್ರಾoಶಗಳನ್ನು ಅಭಿವೃದ್ಧಿಪಡಿಸಿದೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲೂ ಕನ್ನಡ ಲಿಪಿಯು ಹೆಚ್ಚು ಬಳಕೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿರುತ್ತದೆ. ವಿಜ್ಞಾನ-ತಂತ್ರಜ್ಞಾನದ ಜೊತೆ ಜೊತೆಗೂ ಕನ್ನಡವನ್ನು ಬಳಸಿ, ಬೆಳೆಸಬೇಕಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷ ಪೂರ್ಣಗೊಳ್ಳುತ್ತಿದ್ದು, ಹಲವು ‘ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ಜನರ ಮನಃ ಗೆದ್ದಿದೆ. ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಪಸರಿಸುವಲ್ಲಿ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದವರು ಹೇಳಿದರು.
ಮೈಸೂರು ರಾಜ್ಯವು ‘ಕರ್ನಾಟಕ’ ಎಂದು ಮರು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿದೆ. ಈ ಶುಭ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ‘ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬoಧಿಸಿದoತೆ ಹಾಗೂ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಕರ್ನಾಟಕ ಸಂಭ್ರಮ 50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ನಿಮಿತ್ತ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ಈಗಾಗಲೇ ಜರುಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕನ್ನಡ ನಾಡು-ನುಡಿ, ಕಲೆ, ಸಂಸ್ಕೃತಿ ಜಾನಪದ, ಸಾಹಿತ್ಯ ಹೀಗೆ ವಿವಿಧ ಕ್ಷೇತ್ರ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕನ್ನಡ ನಾಡು-ನುಡಿಗೆ ವಿಶೇಷ ಆದ್ಯತೆ ನೀಡಿದೆ ಎಂದು ಮಾಹಿತಿ ನೀಡಿದರು.
ಕನ್ನಡವು ಯಾವುದೋ ಮತ ಪಂಥದ ಭಾಷೆಯಲ್ಲ. ಅದು ಈ ನಾಡಿನ, ಈ ಮಣ್ಣಿನ ಭಾಷೆ. ಈ ಭಾಷೆಯಲ್ಲೇ ನಮ್ಮ ಸಂಸ್ಕೃತಿ ಇದೆ. ನಮ್ಮ ಸಂಸ್ಕಾರ ಇದೆ. ನಮ್ಮ ಸಂಬoಧಗಳು ಇವೆ. ನಮ್ಮ ನಾಗರೀಕತೆ ಇದೆ. ಈ ಭಾಷೆಯ ಶ್ರೀಮಂತಿಕೆಗೆ ಹಲವಾರು ಮಹನೀಯರು ಶ್ರಮಿಸಿದ್ದಾರೆ. ಮುಂದಿನ ತಲೆಮಾರಿಗೆ ಈ ಭಾಷೆಯನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲೆ ಇದೆ. ಕೇವಲ ಭೌಗೋಳಿಕವಾಗಿ, ಆಡಳಿತಾತ್ಮಕವಾಗಿ ಏಕೀಕರಣವಾದರೆ ಸಾಲದು. ಕನ್ನಡದ ಮನಸ್ಸುಗಳು ಏಕೀಕರಣವಾಗಬೇಕು ಎಂಬ ಆಶಯವನ್ನು ಸಚಿವ ಮಹದೇವಪ್ಪ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ನಾವೆಲ್ಲರೂ ಮುಂದಾಗಬೇಕಾಗಿದೆ ಎಂದು ಸಚಿವ ಮಹದೇವಪ್ಪನವರು ಕನ್ನಡಿಗರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಸಿ. ಎನ್.ಮಂಜೇಗೌಡ, ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿ ರಕ್ಷಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ ಸುದರ್ಶನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ. ಕೆ ಹರೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.