ಮೇಕೆದಾಟು ಯೋಜನೆಯಿಂದ ಬೆಂಗಳೂರಿಗರ ನೀರಿನ ಬವಣೆಗೆ ಮುಕ್ತಿ- ಹೆಚ್ ಡಿ ಡಿ

ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬೇಸರ ಪಟ್ಟರು.

ರಾಜ್ಯಸಭೆಯಲ್ಲಿ ಮಾತನಾಡಿದ ಗೌಡರು, ಮಾಹಿತಿ ತಂತ್ರಜ್ಞಾನ ರಾಜಧಾನಿ ಆಗಿರುವ ಬೆಂಗಳೂರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದರು.

ಬೆಂಗಳೂರಿನ ನೀರಿನ ಬವಣೆ ನೀಗಿಸಬೇಕಾದರೆ ಮೇಕೆದಾಟು ಯೋಜನೆಗೆ ಅನುಮತಿ ಸಿಗಬೇಕಿದೆ. ಎಲ್ಲಾ ರಾಜಕೀಯ ಬದಿಗಿಟ್ಟು ಈ ಯೋಜನೆಗೆ ಬೆಂಬಲ ಕೊಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಮೇಕೆದಾಟು ಯೋಜನೆಗಾಗಿ ಕೆಲಸ ಮಾಡಿವೆ. ಆದರೆ ಇಲ್ಲಿಯವರೆಗೂ ಯಶಸ್ಸು ಸಿಕ್ಕಿಲ್ಲ. ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಒಪ್ಪಿಗೆ ನೀಡಬೇಕು ಎಂದು  ಕೋರಿದರು.

ಬೆಂಗಳೂರು ನಗರ ಬೆಳೆಯುತ್ತಲೇ ಇದೆ, ಉದ್ಯೋಗ ಅರಸಿ ದೇಶದ ಎಲ್ಲಾ ಮೂಲೆಗಳಿಂದ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಎಲ್ಲರಿಗೂ ಆಶ್ರಯ ನೀಡುವ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ ಎಂದು ಹೇಳಿದರು.

1.45 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿಗೆ 16 ಟಿಎಂಸಿ ಅಡಿಯಷ್ಟು ಕಾವೇರಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ, ನಗರದ ಬೇಡಿಕೆಗೆ ಹೋಲಿಸಿದರೆ ಈ ನೀರು ಬಹಳ ಕಡಿಮೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ. ಒಂದು ಟ್ಯಾಂಕರ್ ನೀರಿಗೆ 3000 ರೂ ತೆರಬೇಕಿದೆ, ಕೇವಲ ನಾಲ್ಕು ಜನರಿರುವ ಒಂದು ಕುಟುಂಬ ಪ್ರತೀ ತಿಂಗಳು ನೀರಿಗಾಗಿ 20,000 ಖರ್ಚು ಮಾಡಬೇಕಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಎಲ್ಲರೂ ರಾಜಕೀಯ ಬದಿಗಿಟ್ಟು ಮೇಕೆದಾಟು ಯೋಜನೆ ಬಗ್ಗೆ ಬೆಂಬಲ ನೀಡಬೇಕು ಈ ಯೋಜನೆ ಕಾರ್ಯಗತವಾದರೆ ನೀರಿನ ಸಮಸ್ಯೆಗೆ ಮುಕ್ತಿ ದೊರೆಯಲಿದೆ ಎಂದು ದೇವೇಗೌಡರು ತಿಳಿಸಿದರು.