ಹಾಸನ: ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.
ಹಾಸನದ ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿಗಳನ್ನು ತೆರವುಗೊಳಿಸುವ ಭರವಸೆ ನೀಡಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ,ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟೀಸುಗಳನ್ನೂ ನೀಡಿದ್ದರು. ಬಿಜೆಪಿಯವರು ರಾಜಕೀಯ ಇಬ್ಬಂದಿತನ ಮತ್ತು ಇಬ್ಬಂದಿನೀತಿ ಪಾಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ತಾವು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನು ಜನವರಿ 25 ಕ್ಕೆ ನಿಗದಿಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.