ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ‘ಕರ್ನಾಟಕ ಬಂದ್’ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತ, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕವಾಗಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ.
ಕೃಷಿಗೆ ಮಾರಕವಾದ ರೈತರಿಗೆ ಮರಣ ಶಾಸನವಾದ ಈ ಕಾಯ್ದೆಗಳನ್ನು ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಪ್ರತಿಭಟನಾ ನಿರತರರು ಒತ್ತಾಯಿಸಿದರು.
ಕರ್ನಾಟಕ ಬಂದ್ ಗೆ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ರಾಯಚೂರು, ಬೀದರ್, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ಕಂಡು ಬಂದಿತು.
ಮೈಸೂರು, ಚಾಮರಾಜನಗರ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರಾವಳಿ ಜಿಲ್ಲೆ ಗಳಲ್ಲಿ ನೀರಸ ಪ್ರತಿಕ್ರಿಯೆ ಕಂಡು ಬಂದಿದೆ.
ಇಂದಿನ ಬಂದ್ ಗೆ ಕೆಲ ಕನ್ನಡ ಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ರಸ್ತೆ ತಡೆ, ಪ್ರತಿಭಟನೆ ನಡೆಸಿವೆ. ಕೆಲವೆಡೆ ಪ್ರತಿಭಟನಕಾರರನ್ನು ಪೆÇಲೀಸರು ವಶಕ್ಕೆ ಪಡೆದರು.
ಕೋಡಿಹಳ್ಳಿ ಚಂದ್ರಶೇಖರ್, ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆ ಖಂಡಿಸಿದರು.