ಕರ್ನಾಟಕದ ಮಾಜಿ ಮುಖ್ಯಮಂತ್ರಿ‌ ಎಸ್ ಎಂ ಕೃಷ್ಣ ವಿಧಿವಶ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ,  ಹಿರಿಯ ರಾಜಕೀಯ ಮುತ್ಸದ್ದಿ ಎಸ್‌.ಎಂ. ಕೃಷ್ಣ (92) ಅವರು ಮಂಗಳವಾರ ಮುಂಜಾನೆ ವಿಧಿವಶರಾಗಿದ್ದಾರೆ.

ಮಂಗಳವಾರ ನಸುಕಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು, ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದರು,ತಕ್ಷಣ ವೈದ್ಯರು ಮನೆಗೆ ಧಾವಿಸಿ ಚಿಕಿತ್ಸೆ ನೀಡಲು ಪ್ರಯತ್ನಿಸಿದ್ದಾರೆ,ಆದರೆ 3.30ಕ್ಕೆ ವೈದ್ಯರು ಎಸ್‌ಎಂ ಕೃಷ್ಣ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇಡೀ ದಿನ ಸದಾಶಿವನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ.

ಸದಾಶಿವನಗರ ಎಸ್ ಎಂ ಕೃಷ್ಣ ಮನೆ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವ ಕೃಷ್ಣ ಅವರು ಮೇ 1, 1932ರಲ್ಲಿ ಜನಿಸಿದ್ದರು. ಎಸ್.ಸಿ‌.ಮಲ್ಲಯ್ಯ ಮತ್ತು ತಾಯಮ್ಮ ತಂದೆ,ತಾಯಿ.

2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಕೃಷ್ಣ ವಿಧಾನಸಭೆ ಸ್ಪೀಕರ್, ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

2017 ರಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಕೃಷ್ಣ ಅವರು ಕೆಲವೇ ದಿನಗಳಲ್ಲಿ ಬಿಜೆಪಿಗೆ ಸೇರಿದ್ದರು. 2023ರ ಜನವರಿ 7 ರಂದು ಕೃಷ್ಣ ಅವರು ತಮ್ಮ 60 ವರ್ಷಗಳ ಸುರ್ಧೀಘ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.