ನವದೆಹಲಿ: ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರ ವಿರುದ್ಧ ಕಾಂಗ್ರೆಸ್ ಮೈತ್ರಿಕೂಟದ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಲು ನೀಡಿರುವ ನೋಟಿಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹರಿಹಾಯ್ದರು.
ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ದೇವೆಗೌಡರು, ಕಾಂಗ್ರೆಸ್ ಪಕ್ಷದ ಸದಸ್ಯರ ವರ್ತನೆಯನ್ನು ಉಗ್ರವಾಗಿ ಖಂಡಿಸಿ
ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಭಾಪತಿಗಳು ಸದನವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿದ್ದಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಶೈಲಿ ಉತಗತಮವಾಗಿದೆ,
ಸಂಸತ್ತಿನ ಘನತೆಯನ್ನು ಎತ್ತಿಹಿಡಿಯಬೇಕು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷಗಳನ್ನು ಒತ್ತಾಯಿಸಿದರು.
ರಾಜ್ಯಸಭೆಯ ಸಭಾಪತಿಗಳ ವಿರುದ್ಧ ಇಂತಹ ನಿರ್ಣಯವನ್ನು ಮಂಡಿಸಲು ಹೊರಟಿರುವುದು ಇತಿಹಾಸದಲ್ಲಿ ಇದೇ ಮೊದಲು. ಇದು ಒಳ್ಳೆಯ ಸಂಪ್ರದಾಯ ಅಲ್ಲ. ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ದೇವೆಗೌಡರು ಎಚ್ಚರಿಕೆ ನೀಡಿದರು.
ಮೊದಲು ಕಾಂಗ್ರೆಸ್ ಸದಸ್ಯರು ಇಂತಹ ಕೆಟ್ಟ ಸಂಪ್ರದಾಯವನ್ನು ಆರಂಭ ಮಾಡಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲಿದೆ. ನಾವು ಇದನ್ನು ಸಹಿಸುವುದಿಲ್ಲ ಹಾಗೂ ಇದಕ್ಕೆ ಅವಕಾಶವನ್ನು ಕೊಡಬಾರದು ಎಂದು ಹೇಳಿದರು.
ನಿಮ್ಮ ಸದಸ್ಯರು ಸದನದ ಗೌರವ ಹಾಳು ಮಾಡುತ್ತಿದ್ದಾರೆ. ಅವರನ್ನು ತಡೆಯುವ ಜವಾಬ್ದಾರಿ ನಿಮ್ಮದು. ಸಂಸದೀಯ ಸೌಹಾರ್ದತೆಯನ್ನು ಎತ್ತಿಹಿಡಿಯುವುದು ನಿಮ್ಮ ಮತ್ತು ನಿಮ್ಮ ಪಕ್ಷದ ಹೊಣೆಗಾರಿಕೆ ಆಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇವೇಗೌಡರು ನೇರ ಮಾತುಗಳಲ್ಲಿ ತಿಳಿಸಿದರು.