ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಶಾಸಕರ ಡಿನ್ನರ್ ಮೀಟಿಂಗ್:ಡಿಕೆಶಿಗೆ ಕುಟುಕಿದ ಅಶೋಕ್

ಬೆಂಗಳೂರು: ಅತ್ತ ಡಿಸಿಎಂ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ.

ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ ಶೇ. 15ರಷ್ಟು‌ ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ ಎಂದು ಅಶೋಕ್ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ, ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದು ಅಶೋಕ್ ಕುಟುಕಿದ್ದಾರೆ.