ಫೆ. 15ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ಚಾಮರಾಜನಗರ: ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 15ರಂದು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಹೇಳಿದರು. 

   ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಸಂಪುಟ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯ ತಿಳಿಸಿದರು. 

   ಈ ಮೊದಲು ಫೆಬ್ರವರಿ 13ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ 13, 14ರಂದು ಬೆಂಗಳೂರಿನಲ್ಲಿ ಗ್ಲೋಬಲ್ ಇನ್ವೆಸ್ಟ್ ರ್  ಮೀಟ್ ಇರುವುದರಿಂದ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 15ಕ್ಕೆ ನಿಗದಿ ಮಾಡಲಾಗಿದೆ ಎಂದರು. 

   ಸಚಿವ ಸಂಪುಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಇಲಾಖಾವಾರು ಅಧಿಕಾರಿಗಳು ಅಭಿವೃದ್ದಿ ಕೆಲಸಗಳ ಸಂಬಂಧ ಮಾಹಿತಿ ವಿವರಗಳನ್ನು ನೀಡಿದ್ದಾರೆ. ಈ ಕುರಿತು ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಬೇಕಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಭಿವೃದ್ದಿ ಸಂಬಂಧ ಏನೇನೂ ಸಾಧ್ಯವೋ ಅವೆಲ್ಲವನ್ನೂ ಮಾಡಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

   ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಇದ್ದರು.  

   ಇದಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತ ಮುಖಂಡರ ಅಹವಾಲುಗಳನ್ನು ಆಲಿಸಿ ಚರ್ಚೆ ನಡೆಸಿದರು.