ನವದೆಹಲಿ: ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ನವದೆಹಲಿಯಲ್ಲಿನ ಸಚಿವ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಕುಮಾರಸ್ವಾಮಿ ಅವರು ನೆನೆಗುದಿಗೆ ಬಿದ್ದಿದ್ದ ಈ ಯೋಜನೆ ಕುರಿತು ಸಚಿವರಲ್ಲಿ ಮನವಿ ಮಾಡಿದರು.
ಕುಮಾರಸ್ವಾಮಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಗಡ್ಕರಿ ಅವರು ಆದಷ್ಟು ಬೇಗ ಯೋಜನೆಯ ಪ್ರಸ್ತಾವನೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ ಮುಂದೆ ಮಂಡಿಸಿ ತ್ವರಿತವಾಗಿ ಅನುಷ್ಠಾನಗೊಳಿಸಲು ಸಹಕರಿಸುವುದಾಗಿ ಭರವಸೆ ನೀಡಿದರು.
ನಾಲ್ಕರಿಂದ ಆರು ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ.
ಎಂಟು ವರ್ಷಗಳಿಂದ ಬಾಕಿ ಇದ್ದ ಭೂಸ್ವಾಧೀನ ಪರಿಹಾರದ ಹಣವನ್ನು ಕೂಡಲೇ ರೈತರಿಗೆ ಪಾವತಿ ಮಾಡಲು ಸಚಿವ ಗಡ್ಕರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಮನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಈ ವೇಳೆ ಕುಮಾರಸ್ವಾಮಿ ತಿಳಿಸಿದರು.
ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದೆ, ಯೋಜನೆಯ ಸುಮಾರು 4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ ಎಂದು ಹೆಚ್ ಡಿ ಕೆ ತಿಳಿಸಿದರು.
ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹವಾದುದು ಎಂದು ಕುಮಾರಸ್ವಾಮಿ ಹೇಳಿದರು.